ಮಡಿಕೇರಿ, ಅ.19, NEWS DESK ಕನ್ನಡ: ಕೊಡಗು ಜಿಲ್ಲೆಯ ವಿವಿಧೆಡೆ ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಗದಿತ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಅಬಕಾರಿ ಕಾಯ್ದೆ 1965ರ ಕಲಂ 21ರ ಅಡಿಯಲ್ಲಿ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಲಾಗಿದ್ದು, ವಿವಿಧ ಪ್ರದೇಶಗಳಲ್ಲಿ ಪ್ರತ್ಯೇಕ ಸಮಯಗಳಲ್ಲಿ ಮದ್ಯ ಮಾರಾಟ ನಿಷೇಧ ಜಾರಿಯಲ್ಲಿರಲಿದೆ.
ಅಕ್ಟೋಬರ್ 20ರಂದು: ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸುಂಟಿಕೊಪ್ಪ, 7ನೇ ಹೊಸಕೋಟೆ, ಕಂಬಿಬಾಣಿ ಹಾಗೂ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಅಕ್ಟೋಬರ್ 21ರಿಂದ 22ರವರೆಗೆ: ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 22ರ ಸಂಜೆ 6 ಗಂಟೆಯವರೆಗೆ ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತಮುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಹಾಗೂ ಸುಂಟಿಕೊಪ್ಪ, ಕುಶಾಲನಗರ, ಬೆಟ್ಟಗೇರಿ ಮತ್ತು ಮುರ್ನಾಡು ನಗರ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಗೋಣಿಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ: ಅಕ್ಟೋಬರ್ 21ರ ಬೆಳಗ್ಗೆ 6 ಗಂಟೆಯಿಂದ ಅಕ್ಟೋಬರ್ 22ರ ಬೆಳಗ್ಗೆ 10 ಗಂಟೆಯವರೆಗೆ ಗೋಣಿಕೊಪ್ಪ ನಗರ ಮತ್ತು ಅದರ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ, ಪೊನ್ನಂಪೇಟೆ ತಾಲ್ಲೂಕಿನಾದ್ಯಂತ ಹಾಗೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮತ್ತಿ, ಬಿಟ್ಟಂಗಾಲ, ಸಿದ್ಧಾಪುರ ಮತ್ತು ಪಾಲಿಬೆಟ್ಟ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಸಂಬಂಧಿತ ಪ್ರದೇಶಗಳ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಬಾರ್ಗಳು, ಹೋಟೆಲ್ಗಳು ಹಾಗೂ ಕ್ಲಬ್ಗಳಲ್ಲಿ ಎಲ್ಲ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
















