ಸೋಮವಾರಪೇಟೆ, NEWS DESK ಅ.19: ತಾಲ್ಲೂಕಿನ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರಕ್ಕೆ ಭಾನುವಾರ (ಅ.18) ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅಪ್ಪಚ್ಚು ರಂಜನ್, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಸಮಯಪ್ರಜ್ಞೆಯನ್ನು ರೂಢಿಸಿಕೊಳ್ಳಬೇಕು. ಸಾಮಾಜಿಕ ಜಾಗೃತ ಮನೋಭಾವ ಬೆಳೆಸಿಕೊಂಡು ಸುತ್ತಮುತ್ತಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು. ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ವಿದ್ಯಾರ್ಥಿ ಜೀವನದಲ್ಲಿ ಪರಸ್ಪರ ಸಹಕಾರ, ಶಿಸ್ತು, ಸಂಯಮ ಹಾಗೂ ತಾಳ್ಮೆಯನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಾಳಜಿ, ನಾಯಕತ್ವದ ಗುಣಗಳು ಹಾಗೂ ನಿಸ್ವಾರ್ಥ ಸೇವಾ ಮನೋಭಾವವನ್ನು ಬೆಳೆಸುವ ಪ್ರಮುಖ ವೇದಿಕೆಗಳಾಗಿವೆ ಎಂದರು.
ಕೊಡಗಿನಲ್ಲಿ ಎಂಟು ವರ್ಷಗಳ ಹಿಂದೆ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನಿರಾಶ್ರಿತರಿಗೆ ಜಂಬೂರಿನಲ್ಲಿ ಕಲ್ಪಿಸಲಾದ ಪುನರ್ವಸತಿ ಪ್ರದೇಶದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಬಡಾವಣೆಯ ಮನೆಗಳಿಗೆ ಭೇಟಿ ನೀಡಬೇಕು. ಅಲ್ಲಿನ ಜನರ ಬದುಕು, ಕಷ್ಟ-ಸುಖ ಹಾಗೂ ಸಮಸ್ಯೆಗಳ ಕುರಿತು ಅಧ್ಯಯನ ನಡೆಸುವ ಮೂಲಕ ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ರಂಜನ್ ಸಲಹೆ ನೀಡಿದರು.
ನಿವೃತ್ತ ಡಿಸಿಪಿ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ, ದೃಢಸಂಕಲ್ಪದೊಂದಿಗೆ ನಿರಂತರ ಅಧ್ಯಯನ ನಡೆಸಿದರೆ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ಮಾದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಭರತ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಲಭ್ಯವಿರುವ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಉತ್ತಮ ಶಿಕ್ಷಣದೊಂದಿಗೆ ಸಾಧಕರಾಗಿ ಹೊರಹೊಮ್ಮಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿ. ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ನಾಯಕತ್ವ, ಸಂಸ್ಕಾರ ಹಾಗೂ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸಿ.ಜಿ. ಮಂದಪ್ಪ ಅವರು ರಾಷ್ಟ್ರೀಯ ಸೇವಾ ಯೋಜನೆಯ ಧ್ಯೇಯೋದ್ದೇಶಗಳನ್ನು ತಿಳಿಸಿದರು. ಶಿಬಿರಾಧಿಕಾರಿ ಮನೋಹರ್ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ರಾಜ ಸುಂದರಂ ವಂದಿಸಿದರು.
ಕಾರ್ಯಕ್ರಮದಲ್ಲಿ ಟಾಟಾ ಕಾಫಿ ಸಂಸ್ಥೆಯ ವ್ಯವಸ್ಥಾಪಕ ಬಿ.ಎ. ಕರುಂಬಯ್ಯ ಉಪಸ್ಥಿತರಿದ್ದರು. ಉಪನ್ಯಾಸಕರಾದ ಮೋಹನ್ ಹೆಗ್ಡೆ, ಸೀಮಾ ಕೆ.ಕೆ., ಪ್ರಫುಲ್ಲ ಕುಮಾರಿ ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು.


















