ವಿರಾಜಪೇಟೆ, ಅ.23 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನ.2ರಂದು ವಿರಾಜಪೇಟೆಯ ಮಹಿಳಾ ಸಮಾಜದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ತಾಲ್ಲೂಕು ಮಟ್ಟದ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ತಿಳಿಸಿದ್ದಾರೆ. ಅಂದು ಪೂರ್ವಾಹ್ನ 10 ಗಂಟೆಗೆ ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠದ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಪಾಲ್ಗೊಳ್ಳಲಿದ್ದಾರೆ. :: ಸಾಧಕರಿಗೆ ಸನ್ಮಾನ :: ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಲಿಂಪಿಯನ್ ಕೂತಂಡ ಪೂಣಚ್ಚ (ಕ್ರೀಡೆ), ಬಾಚುರ ಎಸ್. ಪೂಣಚ್ಚ (ಸೇನೆ), ಚೆನ್ನಯ್ಯನಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಕವಿತಾ ಕೆ.ಡಿ. (ಶಿಕ್ಷಣ) ಹಾಗೂ ಬಾದುಮಂಡ ಬೀನಾ ಕಾಳಯ್ಯ (ಸಾಹಿತ್ಯ) ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. :: ಸ್ಪರ್ಧೆಗಳ ವಿವರ :: ತಾಲ್ಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ನಾಡಗೀತೆಗೆ ಸಾಮೂಹಿಕ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ಶಾಲೆಯಿಂದ ಒಂಬತ್ತು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಭಾಗವಹಿಸಲು ಅವಕಾಶವಿದೆ. ಕಾಲೇಜು ವಿಭಾಗದಲ್ಲಿಯೂ ಕನ್ನಡ ನಾಡಗೀತೆಗೆ ಸಾಮೂಹಿಕ ನೃತ್ಯ ಸ್ಪರ್ಧೆ ನಡೆಯಲಿದ್ದು, ಪ್ರತಿ ಕಾಲೇಜಿನಿಂದ ಒಂಬತ್ತು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದು. ಸಾರ್ವಜನಿಕರಿಗೆ ಕೊಡವ ಹಾಡು ಸ್ಪರ್ಧೆ ಆಯೋಜಿಸಲಾಗಿದ್ದು, ಒಬ್ಬರಿಗೆ ಒಂದು ಹಾಡನ್ನು ಹಾಡಲು ಮಾತ್ರ ಅವಕಾಶ ನೀಡಲಾಗಿದೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಆಸಕ್ತರು ಅಕ್ಟೋಬರ್ 28ರೊಳಗೆ ಕರ್ನಾಟಕ ಸಂಘದ ಕಚೇರಿಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವಂತೆ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ತಿಳಿಸಿದ್ದಾರೆ.

















