ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ ಮಹಿಳಾ ಸಮಾಜದಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ನಡೆಯಿತು.
ಉಡುಪಿ ಜಿಲ್ಲೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬೇಕು. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಹೆಚ್ಚಿಸುವಲ್ಲಿ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದ ಅವರು, ಮಹಿಳೆಯರು ಸಂಘಟಿತರಾಗಿ ಅಭಿವೃದ್ಧಿಯತ್ತ ಸಾಗುವಂತೆ ಮಾರ್ಗದರ್ಶನ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ವಾಣಿಶ್ರೀ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ತಮ್ಮದೇ ಆದ ಗುರುತನ್ನು ಬೆಳೆಸಿಕೊಳ್ಳಬೇಕು. ಮಹಿಳೆಯರ ತ್ಯಾಗಮಯ ಜೀವನದ ಮಹತ್ವವನ್ನು ಅರಿತುಕೊಳ್ಳುವುದರ ಜೊತೆಗೆ ಮಕ್ಕಳು ತಪ್ಪು ದಾರಿಗೆ ಹೋಗದಂತೆ ಉತ್ತಮ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿಯನ್ನು ಪೋಷಕರು ನಿರ್ವಹಿಸಬೇಕು ಎಂದು ಹೇಳಿದರು.
ಮಡಿಕೇರಿಯ ಜಿಲ್ಲಾ ಪೊಲೀಸ್ ಕಚೇರಿಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಪೊಲೀಸ್ ಉಪನಿರೀಕ್ಷಕಿ ಸುಮತಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಶ್ಲಾಘಿಸಿದರು. ಇದೇ ವೇಳೆ ಉಪಯುಕ್ತ ಸಲಹೆಗಳನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪೊನ್ನಂಪೇಟೆಯ ಸಿಐಟಿಯು ಕಾಲೇಜಿನ ಕನ್ನಡ ಉಪನ್ಯಾಸಕಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಡಾ. ಸುಶ್ಮಿತಾ ಪಿ.ವಿ. ಅವರು ‘ಸ್ವಾವಲಂಬಿ ಬದುಕಿನ ನಿರ್ವಹಣೆಯಲ್ಲಿ ಸ್ವಉದ್ಯೋಗದ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಮಹಿಳೆಯರಿಗೆ ಸುಲಭವಾಗಿ ಕೈಗೊಳ್ಳಬಹುದಾದ ಸ್ವಉದ್ಯೋಗಗಳ ಕುರಿತು ಮಾಹಿತಿ ನೀಡಿದ ಅವರು, ಅವುಗಳನ್ನು ಕಾರ್ಯರೂಪಕ್ಕೆ ತರುವ ವಿಧಾನಗಳನ್ನೂ ವಿವರಿಸಿದರು.
ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲ್ಯಾನ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಪಳೆಯಂಡ ಪಾರ್ಥ ಚಿನ್ನಪ್ಪ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ರಂಗೋಲಿ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜ್ಞಾನ ನಿಧಿ ಶಿಷ್ಯವೇತನದ ಫಲಾನುಭವಿ ಮಕ್ಕಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಜ್ಞಾನವಿಕಾಸ ಕೇಂದ್ರದ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ತಾಲೂಕು ಯೋಜನಾಧಿಕಾರಿ ಹರೀಶ್ ಪಿ. ಹಾಗೂ ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕರಾದ ಧನೇಶ್, ವಸಂತ್, ಶಿವಕುಮಾರ್, ಗೀತಾ, ಪುಷ್ಪಲತಾ, ಪ್ರತಾಪ್ ಸೇರಿದಂತೆ ಜ್ಞಾನವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

















