ಮಡಿಕೇರಿ, NEWS DESK ಅ. 29: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ನಂಬಿಕೆ ಇಲ್ಲದ ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ಅಪನಂಬಿಕೆಯಿಂದ ನೋಡುತ್ತಿದೆ. ಸುಳ್ಳು ಆರೋಪಗಳ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆರೋಪಿಸಿದರು.
ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ನಾಯಕರು ಸಂವಿಧಾನ, ಸಂಸತ್ತು ಹಾಗೂ ಚುನಾವಣಾ ಪ್ರಕ್ರಿಯೆಯ ಬಗ್ಗೆಯೇ ನಂಬಿಕೆ ಹೊಂದಿಲ್ಲ ಎಂದು ಟೀಕಿಸಿದರು.
ನಿರಂತರವಾಗಿ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್ಐಆರ್) ಕುರಿತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್, ಮತಗಳ್ಳತನದ ಆರೋಪಗಳನ್ನು ಮಾಡುತ್ತಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸುವ ಬದಲು, ನಿಜವಾಗಿಯೂ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರನ್ನು ಗುರುತಿಸಿ ಮತ್ತೆ ಸೇರ್ಪಡೆಗೊಳಿಸಲು ಪ್ರಯತ್ನಿಸಲಿ ಎಂದು ಅವರು ಸವಾಲು ಹಾಕಿದರು.
ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಕುರಿತು ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಬ್ರಿಜೇಶ್ ಚೌಟ, ಈ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯಲ್ಲಿ ಉಳಿದಿರುವ ಮೃತರ ಹೆಸರುಗಳು, ಶಾಶ್ವತವಾಗಿ ಸ್ಥಳಾಂತರಗೊಂಡವರ ಹೆಸರುಗಳು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯಾಗಿರುವ ಹೆಸರುಗಳನ್ನು ತೆಗೆದುಹಾಕಿ ಪಟ್ಟಿಯನ್ನು ಶುದ್ಧೀಕರಿಸುವುದಾಗಿದೆ ಎಂದು ಹೇಳಿದರು. ಈ ಪ್ರಕ್ರಿಯೆಯಲ್ಲಿ ರಾಜಕೀಯ ಪಕ್ಷಗಳ ಭಾಗವಹಿಸುವಿಕೆಗೂ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ ಎಂದರು.
ಎಸ್ಐಆರ್ ಪ್ರಕ್ರಿಯೆಯಿಂದ ದೇಶಾದ್ಯಂತ 13 ಕೋಟಿ ಹಾಗೂ ಕರ್ನಾಟಕದಲ್ಲಿ ಒಂದು ಕೋಟಿ ಮತದಾರರನ್ನು ಕೈಬಿಡಲಾಗಿದೆ ಎಂಬುದು ಕಾಂಗ್ರೆಸ್ ಮಾಡುತ್ತಿರುವ ಆರೋಪ ಎಂದು ಅವರು ತಿಳಿಸಿದರು. ಆದರೆ, ತಮ್ಮ ಪ್ರಕಾರ, ಪ್ರಕ್ರಿಯೆಯ ಆರಂಭಿಕ ಹಂತದಲ್ಲೇ ಮೃತರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿದ್ದವರನ್ನು ಗುರುತಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಿಂದ ಹಿಡಿದು ಕೆಳಹಂತದ ಸಿಬ್ಬಂದಿವರೆಗೂ ರಾಜ್ಯ ಸರ್ಕಾರದ ಸಿಬ್ಬಂದಿಯೇ ಇದ್ದಾರೆ ಎಂದು ಅವರು ಹೇಳಿದರು.
ಕಳೆದ ಐವತ್ತು ವರ್ಷಗಳಿಂದ ಮತದಾರರ ಪಟ್ಟಿಯಲ್ಲಿದ್ದ ಮೃತರ ಹೆಸರುಗಳನ್ನು ತೆಗೆದುಹಾಕಿ ಪಟ್ಟಿಯನ್ನು ಶುದ್ಧೀಕರಿಸುವ ಕಾರ್ಯವನ್ನು ಎಸ್ಐಆರ್ ಮೂಲಕ ಕೈಗೊಳ್ಳಲಾಗಿದೆ ಎಂದು ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿದ ಬ್ರಿಜೇಶ್ ಚೌಟ, ಈ ಹೇಳಿಕೆಯನ್ನು ಗಮನಿಸಿದರೆ ಕಾಂಗ್ರೆಸ್ನಿಂದ ಸುಳ್ಳು ಮಾಹಿತಿ ನೀಡಲಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡುತ್ತಿರುವ ಮತಗಳ್ಳತನದ ಆರೋಪಗಳಿಗೆ ಜನರು ಉತ್ತರ ನೀಡಲು ಆರಂಭಿಸಿದ್ದಾರೆ ಎಂದು ಹೇಳಿದ ಅವರು, ನಾಲ್ಕು ವಿಧಾನಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಗಳು ಇದಕ್ಕೆ ಉದಾಹರಣೆ ಎಂದು ಪ್ರತಿಪಾದಿಸಿದರು. ಕಾಂಗ್ರೆಸ್ ಈ ಹಿಂದೆಯೂ ಇವಿಎಂ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದರೂ, ಅದಕ್ಕೆ ಪುರಾವೆಗಳನ್ನು ನೀಡಿಲ್ಲ ಎಂದು ಆರೋಪಿಸಿದರು. ಎಸ್ಐಆರ್ಗೆ ಸಂಬಂಧಿಸಿದ ಆಕ್ಷೇಪಗಳ ಕುರಿತು ಸುಪ್ರೀಂ ಕೋರ್ಟ್ ಕಾಂಗ್ರೆಸ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದ್ದರೂ, ಅದನ್ನು ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ಎಸ್ಐಆರ್ ಪ್ರಕ್ರಿಯೆಯ ವಿಚಾರದಲ್ಲಿ ಕಾಂಗ್ರೆಸ್ ಮುಸ್ಲಿಂ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಬ್ರಿಜೇಶ್ ಚೌಟ ಆರೋಪಿಸಿದರು. ಬಿಜೆಪಿ ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಎಷ್ಟು ಮುಸ್ಲಿಂ ಮತ್ತು ಹಿಂದೂ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿವೆ ಎಂಬುದನ್ನು ಕಾಂಗ್ರೆಸ್ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದರು.
ನಮೂನೆ ಸಂಖ್ಯೆ 7ರ ಮೂಲಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ ಅವರು, ಈ ನಮೂನೆಯ ಮೂಲಕ ಹೆಸರುಗಳನ್ನು ತೆಗೆದುಹಾಕುವ ಪ್ರಕ್ರಿಯೆ ನಡೆಯುತ್ತಿದ್ದರೂ, ಅಗತ್ಯ ದಾಖಲೆಗಳನ್ನು ಸಲ್ಲಿಸುವ ಮೂಲಕ ಅರ್ಹ ಮತದಾರರು ತಮ್ಮ ಹೆಸರನ್ನು ಮತ್ತೆ ಮತದಾರರ ಪಟ್ಟಿಗೆ ಸೇರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅಪನಂಬಿಕೆ ಮೂಡಿಸಿ ಅರಾಜಕತೆ ಸೃಷ್ಟಿಸುವ ಪ್ರಯತ್ನಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ‘ಲೋಕತಂತ್ರ ಬಚಾವೋ–ಕುತಂತ್ರ ಹಟಾವೋ’ ಅಭಿಯಾನವನ್ನು ಪಕ್ಷ ಸಂಘಟಿಸಿದೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಈ ಅಭಿಯಾನದಡಿ ಕೊಡಗು ಜಿಲ್ಲೆಯಾದ್ಯಂತ ನವೆಂಬರ್ ತಿಂಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ತಳೂರು ಕಿಶೋರ್ ಕುಮಾರ್, ಮಹೇಶ್ ಜೈನಿ, ಬಿ.ಕೆ. ಅರುಣ್ ಕುಮಾರ್, ಶಜಿಲ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

















