ವಿರಾಜಪೇಟೆ, NEWS DESK ನ.1: ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆಯ ಪಾಲಿಬೆಟ್ಟ ಪಶುಪಾಲನಾ ಕೇಂದ್ರದ ವತಿಯಿಂದ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.
ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಅಭಿಯಾನಕ್ಕೆ ಕಾಫಿ ಬೆಳೆಗಾರ ಹಾಗೂ ಏಷ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತೆ ಜೋಶ್ನಾ ಚಿಣ್ಣಪ್ಪ ಅವರ ತಂದೆ ಅಂಜನ್ ಚಿಣ್ಣಪ್ಪ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿರುವ ರೇಬಿಸ್ ಲಸಿಕಾ ಕಾರ್ಯಕ್ರಮ ಉತ್ತಮ ಕಾರ್ಯವಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಕೇಂದ್ರದ ಸಹಯೋಗದಲ್ಲಿ ಶೇ.90ರಷ್ಟು ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಮೋದ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ಬೀದಿ ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿದ್ದು, ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಿಸುವ ಮೂಲಕ ರೋಗ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ. ಮುಂದಿನ ದಿನಗಳಲ್ಲಿ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿಯೂ ಈ ಅಭಿಯಾನವನ್ನು ನಡೆಸಲಾಗುವುದು. ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನಡೆಯಬೇಕು ಎಂದರು.
ಪಾಲಿಬೆಟ್ಟ ಪಶುಪಾಲನಾ ಕೇಂದ್ರದ ವೈದ್ಯಾಧಿಕಾರಿ ಡಾ. ನವೀನ್ ಮಾತನಾಡಿ, ರೇಬಿಸ್ ಲಸಿಕಾ ಅಭಿಯಾನ ಅತ್ಯಗತ್ಯವಾಗಿದೆ. ಇತ್ತೀಚೆಗೆ ರೇಬಿಸ್ ಸೋಂಕಿತ ಬೀದಿ ನಾಯಿಯೊಂದು ಬಾಲಕನಿಗೆ ಕಚ್ಚಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಭಿಯಾನದ ಅಂಗವಾಗಿ ಒಟ್ಟು 56 ಬೀದಿ ನಾಯಿಗಳಿಗೆ ರೇಬಿಸ್ ಲಸಿಕೆ ಹಾಕಲಾಯಿತು.
ಈ ಸಂದರ್ಭದಲ್ಲಿ ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಪಶುಪಾಲನಾ ಇಲಾಖೆಯ ಸಿಬ್ಬಂದಿಗಳು, ಸಮಾಜ ಸೇವಕ ಉತ್ತಪ್ಪ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

















