ವಿರಾಜಪೇಟೆ, NEWS DESK ನ.1: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ವಿಜಯದಶಮಿ ಪ್ರಯುಕ್ತ ಪಥಸಂಚಲನವು ಶನಿವಾರ ಸಂಜೆ ವಿರಾಜಪೇಟೆ ಪಟ್ಟಣದಲ್ಲಿ ವರ್ಣರಂಜಿತವಾಗಿ ನಡೆಯಿತು.
ಪಟ್ಟಣದ ಪಂಜರುಪೇಟೆಯಲ್ಲಿ ಭಾರತಮಾತೆ ಹಾಗೂ ಪರಮಪೂಜ್ಯ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಪ್ರಾರ್ಥನೆ ನೆರವೇರಿಸುವ ಮೂಲಕ ಪಥಸಂಚಲನಕ್ಕೆ ಚಾಲನೆ ನೀಡಲಾಯಿತು.
ಭಾರತಮಾತೆಯ ಭಾವಚಿತ್ರವನ್ನು ಹೊತ್ತ ವಾಹನ ಹಾಗೂ ವಾದ್ಯಘೋಷಗಳೊಂದಿಗೆ ಆರಂಭಗೊಂಡ ಪಥಸಂಚಲನವು ಪಂಜರುಪೇಟೆಯಿಂದ ಮೊಗರಗಲ್ಲಿ, ತೆಲುಗರ ಬೀದಿ, ಗಡಿಯಾರ ಕಂಬ, ಖಾಸಗಿ ಬಸ್ ನಿಲ್ದಾಣದ ಮೂಲಕ ಸಾಗಿ, ಪುನಃ ಗಡಿಯಾರ ಕಂಬದ ಮಾರ್ಗವಾಗಿ ಮಹಿಳಾ ಸಮಾಜದಲ್ಲಿ ಸಮಾಪ್ತಿಗೊಂಡಿತು.
ಪಥಸಂಚಲನ ಸಾಗುವ ಮಾರ್ಗದುದ್ದಕ್ಕೂ ಹಿಂದೂ ಬಾಂಧವರು ಗಣವೇಷಧಾರಿಗಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಗೌರವ ಸಲ್ಲಿಸಿದರು. ವಿರಾಜಪೇಟೆ ನಗರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತರು ಗಣವೇಷ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ಪಥಸಂಚಲನದ ಹಿನ್ನೆಲೆಯಲ್ಲಿ ವಿರಾಜಪೇಟೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪಥಸಂಚಲನದಲ್ಲಿ ಪಾಲ್ಗೊಂಡಿದ್ದವರಿಗೆ ಮಹಿಳಾ ಸಮಾಜದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರು, ಪದಾಧಿಕಾರಿಗಳು, ವಿವಿಧ ಹಿಂದೂ ಸಂಘಟನೆಗಳ ನಾಯಕರು, ಪದಾಧಿಕಾರಿಗಳು ಹಾಗೂ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

















