ಬಾಳೆಲೆ, NEWS DESK ನ.1: ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಸಹ ಕಾರ್ಯದರ್ಶಿ ಪೊಡಮಾಡ ಮೋಹನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ ಅವರು, ಕರ್ನಾಟಕ ರಾಜ್ಯ ಉದಯವಾದ ಸುದಿನವನ್ನು ಪ್ರತಿವರ್ಷ ಕನ್ನಡ ರಾಜ್ಯೋತ್ಸವವಾಗಿ ಆಚರಿಸುವುದರ ಜೊತೆಗೆ, ಕನ್ನಡ ನಾಡು, ನುಡಿ, ನೆಲ, ಜಲ, ಸಾಹಿತ್ಯ, ಕ್ರೀಡೆ, ಸಾಂಸ್ಕೃತಿಕ, ವೈಜ್ಞಾನಿಕ ಹಾಗೂ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸ್ಮರಿಸಬೇಕು ಎಂದರು.
ಕನ್ನಡ ಭಾಷೆಯ ಬೆಳವಣಿಗೆ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ. ಕನ್ನಡದ ತೇರನ್ನು ಮುಂದಕ್ಕೆ ಎಳೆಯಲು ಪ್ರತಿಯೊಬ್ಬ ವಿದ್ಯಾರ್ಥಿಯೂ ಕೈಜೋಡಿಸಬೇಕೆಂದು ಕರೆ ನೀಡಿದರು.
ಶಿಕ್ಷಕರಾದ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕರಾದ ಚಂದ್ರಶೇಖರ್, ಶಿಕ್ಷಕರಾದ ಬೆನೆಡಿಕ್ಟ್ ಫೆರ್ನಾಂಡಿಸ್, ಪಡಿಞರಂಡ ಪ್ರಭು ಕುಮಾರ್, ಸುಬ್ಬಯ್ಯ, ಜಯಣ್ಣ, ತಿಮ್ಮರಾಜು, ಬೋಧಕೇತರ ಸಿಬ್ಬಂದಿಗಳಾದ ಮಮತಾ, ಸುರೇಶ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

















