ಮಡಿಕೇರಿ NEWS DESK ನ.2 : ರಂಗಭೂಮಿ ಕಲಾವಿದ ಅಡ್ಡಂಡ ಸಿ.ಕಾರ್ಯಪ್ಪ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣವನ್ನು ಕೊಡಗು ಕಲಾವಿದರ ಸಂಘ ತೀವ್ರವಾಗಿ ಖಂಡಿಸಿದೆ. ಕಲಾವಿದರ ಮೇಲೆ ಇಂತಹ ಕೃತ್ಯಗಳು ನಡೆಯುವುದು ಖಂಡನೀಯವಾಗಿದ್ದು, ಕಲಾವಿದರ ಗೌರವ, ಸ್ವಾತಂತ್ರ್ಯ ಮತ್ತು ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ. ಈ ಕುರಿತು ಪ್ರತಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ವಾಂಚಿರ ವಿಠಲ್ ನಾಣಯ್ಯ ಅವರು, ರಂಗಭೂಮಿ ಸೇರಿದಂತೆ ವಿವಿಧ ಕಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ತಮ್ಮ ಕಲೆಯ ಮೂಲಕ ಸಮಾಜದಲ್ಲಿ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವ ಮಹತ್ವದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹ ಕಲಾವಿದರನ್ನು ಗುರಿಯಾಗಿಸಿಕೊಂಡು ಅವಮಾನಿಸುವುದು ಹಾಗೂ ಅವರ ಮೇಲೆ ದೌರ್ಜನ್ಯ ಎಸಗುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ. ಕಲಾವಿದರಿಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ಕಲಾ ಚಟುವಟಿಕೆಗಳಲ್ಲಿ ನಿರ್ಭೀತಿಯಿಂದ ತೊಡಗಿಸಿಕೊಳ್ಳುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಕಾನೂನುಬದ್ಧವಾಗಿ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ವ್ಯಕ್ತಪಡಿಸಬೇಕು. ವೈಯಕ್ತಿಕವಾಗಿ ಅವಮಾನಿಸುವ ಅಥವಾ ದೈಹಿಕವಾಗಿ ಹಲ್ಲೆ ನಡೆಸುವ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಈ ಪ್ರಕರಣವನ್ನು ಗೃಹ ಸಚಿವರು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ಎಲ್ಲಾ ಕಲಾವಿದರಿಗೆ ಸೂಕ್ತ ಪೊಲೀಸ್ ರಕ್ಷಣೆ ಹಾಗೂ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸಬೇಕು ಎಂದು ವಾಂಚಿರ ವಿಠಲ್ ನಾಣಯ್ಯ ಮನವಿ ಮಾಡಿದ್ದಾರೆ.

















