ನಾಪೋಕ್ಲು, NEWS DESK ನ. 2: ಸಮೀಪದ ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಹಾಗೂ ತರಗತಿ ಕೊಠಡಿಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಯಾವುದೇ ಕ್ಷಣದಲ್ಲಾದರೂ ಕುಸಿದು ಬೀಳುವ ಭೀತಿ ಎದುರಾಗಿದೆ.
ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪುಟ್ಟ ಮಕ್ಕಳ ಜೀವಕ್ಕೆ ಅಪಾಯ ಎದುರಾಗಿರುವುದು ತೀವ್ರ ಆತಂಕಕಾರಿ ಸಂಗತಿಯಾಗಿದೆ ಎಂದು ಬಿಜೆಪಿ ಕೊಡಗು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದೆ.
ಶಾಲಾ ಮಕ್ಕಳ ಸುರಕ್ಷತೆಗೆ ಅತ್ಯಂತ ಆದ್ಯತೆ ನೀಡಬೇಕಾಗಿದ್ದರೂ, ಕಟ್ಟಡ ದುರಸ್ತಿಗೆ ಸರ್ಕಾರದ ಬಳಿ ಅನುದಾನವಿಲ್ಲದಿರುವುದು ಖೇದಕರ. ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಕಟ್ಟಡವನ್ನು ದುರಸ್ತಿಗೊಳಿಸುವುದು ಸರ್ಕಾರದ ಮೂಲಭೂತ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಕ್ಷಣ ಶಾಲೆಗೆ ಭೇಟಿ ನೀಡಿ ಕಟ್ಟಡದ ಸುರಕ್ಷತಾ ಪರಿಶೀಲನೆ ನಡೆಸಬೇಕು. ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ದುರಸ್ತಿ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

















