
ಮಡಿಕೇರಿ NEWS DESK ನ.3 : ಮೀಸಲಾತಿಯ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡಗು ಜಿಲ್ಲಾ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟ ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.
ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ರಾಜ್ಯ ಉಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳಿಗೆ ಶೇ.2 ಹಾಗೂ ಪರಿಶಿಷ್ಟ ಪಂಗಡಗಳಿಗೆ ಶೇ.4ರಷ್ಟು ಹೆಚ್ಚುವರಿ ಮೀಸಲಾತಿಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಸರಕಾರ ತಕ್ಷಣ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಒಕ್ಕೂಟದ ಪ್ರಮುಖರು ಒತ್ತಾಯಿಸಿದರು. ಶೇ.15ರ ಮೀಸಲಾತಿಯಲ್ಲಿ ಅವೈಜ್ಞಾನಿಕವಾಗಿ ಒಳಮೀಸಲಾತಿ ವರ್ಗೀಕರಣ ಮಾಡಿ ಎಸ್ಸಿ ಸಾಮಾನ್ಯ ಕೋಟಾವನ್ನು ಹೊಸದಾಗಿ ಸೃಜಿಸಿರುವುದನ್ನು ರದ್ದುಗೊಳಿಸಿ, 1995ರ ಮೀಸಲಾತಿ ರೋಸ್ಟರ್ ಬಿಂದುಗಳನ್ನು ಅಳವಡಿಸಿಕೊಳ್ಳಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ರೂಪಿಸಿರುವ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ಇತರೆ ಉದ್ದೇಶಗಳಿಗೆ ದುರ್ಬಳಕೆ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿಯೂ ಒಳಮೀಸಲಾತಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಮನವಿ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ಒಕ್ಕೂಟದ ಜಿಲ್ಲಾಧ್ಯಕ್ಷ ನಂದ ಕುಮಾರ್, ಪ್ರಧಾನ ಕಾರ್ಯದರ್ಶಿ ಕುಮಾರ ಸ್ವಾಮಿ, ಗೌರವಾಧ್ಯಕ್ಷ ಶಿವಕುಮಾರ್, ಸಲಹೆಗಾರ ರಾಜಣ್ಣ, ಖಜಾಂಚಿ ಕಾವೇರಪ್ಪ, ತಾಲ್ಲೂಕು ಅಧ್ಯಕ್ಷ ವಸಂತ, ಮುಖಂಡರಾದ ಸುಂದರ, ಚಂದ್ರು, ವಿಜಯ್ ಕುಮಾರ್, ಧರ್ಮರಾಜ್ ಹಾಗೂ ಪದ್ಮಾವತಿ ಅವರುಗಳು ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅವರಿಗೆ ಸಲ್ಲಿಸಿದರು.

















