ವಿರಾಜಪೇಟೆ, NEWS DESK ನ.4: ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆಯನ್ನು ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಅವರು, ಕನ್ನಡ ರಂಗಭೂಮಿಗೆ ತಮ್ಮದೇ ಆದ ಕೊಡುಗೆ ನೀಡಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಸಾರ್ವಜನಿಕವಾಗಿ ಮಸಿ ಬಳಿದಿರುವುದು ಅತ್ಯಂತ ಖಂಡನೀಯ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಚಾರ, ಭಿನ್ನಾಭಿಪ್ರಾಯ ಮತ್ತು ಟೀಕೆಗಳಿಗೆ ಅವಕಾಶವಿದೆ. ಆದರೆ ಅವುಗಳನ್ನು ವ್ಯಕ್ತಪಡಿಸಲು ಪ್ರಜಾಸತ್ತಾತ್ಮಕ ಮಾರ್ಗಗಳನ್ನು ಅನುಸರಿಸಬೇಕು. ಕಲಾವಿದರ ಮೇಲೆ ಇಂತಹ ಕೃತ್ಯಗಳ ಮೂಲಕ ದಾಳಿ ನಡೆಸುವುದು ಯಾವುದೇ ಕಾರಣಕ್ಕೂ ಒಪ್ಪತಕ್ಕದ್ದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಲಾವಿದರಿಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕು. ಘಟನೆಯ ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

















