ಮಡಿಕೇರಿ, NEWS DESK ನ.6: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಕರ್ನಾಟಕ ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕಬ್ಬೆ ಸಮೀಪದ ನಾಲಡಿ ಗ್ರಾಮದ ನಿವಾಸಿ ಕೆ.ಸಿ. ಅಶೋಕ ಅಲಿಯಾಸ್ ಕುಡಿಯರ ಅಶೋಕ (36) ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿಯ ವಿರುದ್ಧ 2014ರಿಂದ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮನೆ ಕನ್ನ ಕಳವು ಹಾಗೂ ಇತರ ಕಳ್ಳತನಗಳಿಗೆ ಸಂಬಂಧಿಸಿದಂತೆ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಅವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.
2026ರಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 84/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಕಲಂ 331(3), 331(4) ಮತ್ತು 305(ಎ)ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು.
ಜಾಮೀನಿನ ಮೇಲೆ ಬಿಡುಗಡೆಯಾದ ನಂತರವೂ ಆರೋಪಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೂಂಡಾ ಕಾಯ್ದೆ 1985ರ ಕಲಂ 3(1) ಮತ್ತು 3(2)ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ನವೆಂಬರ್ 2ರಂದು ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಇರಿಸುವಂತೆ ಆದೇಶ ಹೊರಡಿಸಿದ್ದರು.
ಅದರಂತೆ ನವೆಂಬರ್ 3ರಂದು ಆರೋಪಿಯನ್ನು ಬಂಧಿಸಿ ಬಳ್ಳಾರಿ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















