ಸುಂಟಿಕೊಪ್ಪ, NEWS DESK ನ.7: ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಸುಂಟಿಕೊಪ್ಪಕ್ಕೂ ಅವಿನಾಭಾವ ಸಂಬಂಧವಿದೆ. ಗೋಕಾಕ್ ಚಳವಳಿಯ ಸಂದರ್ಭದಲ್ಲಿ ಸಾಹಿತಿ ಶಿವರಾಮ ಕಾರಂತರು ಸುಂಟಿಕೊಪ್ಪಕ್ಕೆ ಆಗಮಿಸಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಚಳವಳಿಯ ಪ್ರಚಾರ ಹಾಗೂ ಮಾಹಿತಿ ಕಾರ್ಯಾಗಾರಗಳನ್ನು ನಡೆಸಿದ್ದನ್ನು ಸ್ಮರಿಸಿಕೊಳ್ಳಬಹುದು ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಎಫ್. ಸೆಬಾಸ್ಟಿನ್ ಹೇಳಿದರು.
ಶುಕ್ರವಾರ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿವಂಗತ ಸಾಯಿನಾಥ್ ಅವರ ಸ್ಮರಣಾರ್ಥ ಆಯೋಜಿಸಿದ್ದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ರಾಷ್ಟ್ರಕವಿ ಕುವೆಂಪು, ದ.ರಾ. ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಮತ್ತು ಶಿವರಾಮ ಕಾರಂತ ಅವರಂತಹ ಮಹಾನ್ ಸಾಹಿತಿಗಳು ಸುಂಟಿಕೊಪ್ಪದ ನೆಲದಲ್ಲಿ ಸಂಚರಿಸಿರುವುದು ಇಲ್ಲಿನ ಸಾಹಿತ್ಯ ಪರಂಪರೆಗೆ ಮತ್ತೊಂದು ಮೈಲಿಗಲ್ಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸುಂಟಿಕೊಪ್ಪದ ಸಾಹಿತಿಯೊಬ್ಬರು ರಾಷ್ಟ್ರೀಯ ಯುವ ಪ್ರಶಸ್ತಿಗೆ ಭಾಜನರಾಗಿರುವುದು ಹಾಗೂ ಸುಂಟಿಕೊಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಸತೀಶ್ ಕಾಜೂರು ಅವರ ಕವನವೊಂದು ವಿಶ್ವವಿದ್ಯಾನಿಲಯದ ಪಠ್ಯಪುಸ್ತಕದಲ್ಲಿ ಅಳವಡಿಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಲತಾ ವಹಿಸಿದ್ದರು.
ದತ್ತಿನಿಧಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಕಾಲೇಜಿನ ಉಪನ್ಯಾಸಕಿ ಸುನೀತಾ ಗಿರೀಶ್ ನಡೆಸಿಕೊಟ್ಟರು.
ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಲೀಲಾವತಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ನಿರ್ದೇಶಕ ಬಿ.ಡಿ. ರಾಜುರೈ, ಕೊಡಗು ಪತ್ರಕರ್ತರ ಸಂಘದ ಹಿರಿಯ ಸದಸ್ಯ ಕೆ.ಎಚ್. ಶಿವಣ್ಣ, ಕಾಲೇಜಿನ ಉಪನ್ಯಾಸಕರು ಹಾಗೂ ಇತರರು ಉಪಸ್ಥಿತರಿದ್ದರು.

















