ಮಡಿಕೇರಿ, NEWS DESK ನ. 9: ಪೆಟ್ರೋಲ್ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ ಮಾಡುವ ಮೂಲಕ ಕಳೆದ 15 ತಿಂಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ಜನಸಾಮಾನ್ಯರಿಂದ ₹1.68 ಲಕ್ಷ ಕೋಟಿ ಹೆಚ್ಚುವರಿ ಹಣ ವಸೂಲಿ ಮಾಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025ರ ಆಗಸ್ಟ್ನಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಪೆಟ್ರೋಲ್ಗೆ ಶೇ.20ರಷ್ಟು ಎಥನಾಲ್ ಮಿಶ್ರಣ ಮಾಡುವ ನಿಯಮವನ್ನು ಸಮರ್ಪಕ ಚರ್ಚೆಗೆ ಅವಕಾಶ ನೀಡದೆ ಜಾರಿಗೆ ತಂದಿದ್ದಾರೆ ಎಂದು ದೂರಿದರು.
ರಾಜ್ಯದ ಏಳು ಜಿಲ್ಲೆಗಳಿಂದ ಸಂಗ್ರಹಿಸಿದ 68 ಪೆಟ್ರೋಲ್ ಮಾದರಿಗಳನ್ನು ಎನ್ಎಬಿಎಲ್ ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ, ಕೆಲವು ಮಾದರಿಗಳಲ್ಲಿ ಶೇ.25ರಿಂದ ಶೇ.31ರವರೆಗೆ ಎಥನಾಲ್ ಮಿಶ್ರಣವಾಗಿರುವುದು ಕಂಡುಬಂದಿದೆ ಎಂದು ತಿಳಿಸಿದರು.
ಪೆಟ್ರೋಲ್ನಲ್ಲಿ ಸರಾಸರಿ ಶೇ.30ರಷ್ಟು ಎಥನಾಲ್ ಮಿಶ್ರಣ ಮಾಡಲಾಗುತ್ತಿದೆ. ಒಂದು ಲೀಟರ್ ಮಿಶ್ರಿತ ಇಂಧನದಲ್ಲಿ 700 ಮಿ.ಲೀ. ಪೆಟ್ರೋಲ್ ಹಾಗೂ 300 ಮಿ.ಲೀ. ಎಥನಾಲ್ ಇರುತ್ತದೆ. ಪೆಟ್ರೋಲ್ ಮತ್ತು ಎಥನಾಲ್ ಬೆಲೆಗಳಲ್ಲಿನ ವ್ಯತ್ಯಾಸವನ್ನು ಪರಿಗಣಿಸಿದರೆ, ಪ್ರತಿ ಲೀಟರ್ ಇಂಧನಕ್ಕೆ ಗ್ರಾಹಕರಿಂದ ಹೆಚ್ಚುವರಿಯಾಗಿ ಸುಮಾರು ₹14 ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಹೆಚ್ಚಿನ ಪ್ರಮಾಣದ ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಮೈಲೇಜ್ ಕಡಿಮೆಯಾಗುವುದಲ್ಲದೆ, ಎಂಜಿನ್ ಸೇರಿದಂತೆ ವಿವಿಧ ಬಿಡಿಭಾಗಗಳಿಗೆ ಹಾನಿಯಾಗುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪೆಟ್ರೋಲ್ ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ವಿಧಿಸುವ ಶೇ.25ರಷ್ಟು ವ್ಯಾಟ್ ಕಡಿಮೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಆದರೆ, ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೇ.30ರಿಂದ ಶೇ.47ರವರೆಗೆ ವ್ಯಾಟ್ ವಿಧಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪೆಟ್ರೋಲ್ ಬಂಕ್ಗಳಲ್ಲಿ ಮಾರಾಟ ಮಾಡುವ ಇಂಧನದಲ್ಲಿರುವ ಎಥನಾಲ್ ಪ್ರಮಾಣವನ್ನು ಸ್ಪಷ್ಟವಾಗಿ ನಮೂದಿಸಿದ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೆ, ಹೆಚ್ಚಿನ ಪ್ರಮಾಣದ ಎಥನಾಲ್ ಮಿಶ್ರಣದಿಂದ ವಾಹನಗಳ ಮೈಲೇಜ್ ಹಾಗೂ ಬಿಡಿಭಾಗಗಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ಎಂ. ನಂದಕುಮಾರ್, ಕೊಟ್ಟಮುಡಿ ಹಂಸ ಹಾಗೂ ಖಾಲಿದ್ ಉಪಸ್ಥಿತರಿದ್ದರು.
























