ಮೈಸೂರು, NEWS DESK ನ.10: ಮೈಸೂರಿನ ಕೆಂಪೇಗೌಡ ವೃತ್ತ (ಮಣಿಪಾಲ್ ಸರ್ಕಲ್)ದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದ ಅವರು, ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಸಾರ್ವಜನಿಕರಿಗೆ ಸಂಚಾರದ ವೇಳೆ ಉಂಟಾಗುವ ಅನಾನುಕೂಲಗಳನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂದು ಸೂಚಿಸಿದರು.
ಕೆಂಪೇಗೌಡ ವೃತ್ತವು ಮೈಸೂರಿನ ಪ್ರಮುಖ ಸಂಚಾರ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತವೆ. ಸುಗಮ ಸಂಚಾರ, ರಸ್ತೆ ಸುರಕ್ಷತೆ ಹಾಗೂ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಇಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಮಹತ್ವದ್ದಾಗಿವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸ್ಥಳಾಂತರಿಸಲಾದ ಮರಗಳನ್ನು ನೆಡಲಾಗಿರುವ ಉದ್ಯಾನವನಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಾಂತರಿಸಲಾದ ಮರಗಳ ಪೈಕಿ ಶೇ.95ರಷ್ಟು ಮರಗಳು ಬದುಕುಳಿದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಮರಗಳ ಆರೋಗ್ಯ ಮತ್ತು ಬೆಳವಣಿಗೆಯನ್ನು ನಿರಂತರವಾಗಿ ಗಮನಿಸಲಾಗುತ್ತಿದ್ದು, ಅವು ಉತ್ತಮವಾಗಿ ಬೆಳೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಪರಿಸರ ಸಂರಕ್ಷಣೆಗೂ ಸಮಾನ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.
ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಪ್ರಮುಖ ಮೂಲಸೌಕರ್ಯ ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಅಭಿವೃದ್ಧಿ ಕಾಮಗಾರಿಗಳ ಪ್ರಯೋಜನಗಳು ಸಾರ್ವಜನಿಕರಿಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
























