ವಿರಾಜಪೇಟೆ, NEWS DESK ನ.10: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು.
ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಅವರು ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮೊದಲಿಗೆ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ವನದುರ್ಗೆ ಹಾಗೂ ಶ್ರೀ ನಾಗದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಸೇವೆ ನೆರವೇರಿಸಲಾಯಿತು.
ಬಲಿಪಾಡ್ಯಮಿ ಪ್ರಯುಕ್ತ ದೇವಸ್ಥಾನದಲ್ಲಿ ಗೋಪೂಜೆ ವಿಶೇಷವಾಗಿ ನಡೆಯಿತು. ಗೋಮಾತೆಗೆ ವಸ್ತ್ರಾಲಂಕಾರ ಮಾಡಿ, ಆರತಿ ಬೆಳಗಿ ಭಕ್ತಿಯಿಂದ ಪ್ರಾರ್ಥಿಸಲಾಯಿತು. ಬಳಿಕ ಮಹಾಮಂಗಳಾರತಿ ಸಲ್ಲಿಸಿ, ಗೋಮಾತೆಗೆ ನೈವೇದ್ಯ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಭಕ್ತರು ಗೋಮಾತೆಗೆ ನಮಸ್ಕರಿಸಿ ಪೂಜೆಯಲ್ಲಿ ಪಾಲ್ಗೊಂಡರು.
ನಂತರ ದೇವಸ್ಥಾನದ ಒಳ ಆವರಣದಲ್ಲಿರುವ ತುಳಸಿ ಕಟ್ಟೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು. ತುಳಸಿ ಕಟ್ಟೆಯನ್ನು ವಿಶೇಷವಾಗಿ ಅಲಂಕರಿಸಿ, ಪಂಚಾಮೃತ ಅಭಿಷೇಕ ಹಾಗೂ ವಿವಿಧ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ಬಳಿಕ ತುಳಸಿ ಮಾತೆಗೆ ಮಹಾಮಂಗಳಾರತಿ ಸಲ್ಲಿಸಿ, ನಾಡಿನ ಹಾಗೂ ಗ್ರಾಮದ ಜನರ ಆರೋಗ್ಯ, ಸುಭಿಕ್ಷೆ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಲಾಯಿತು.
ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳಿಂದ ದೇವಸ್ಥಾನದಲ್ಲಿ ಸಂಜೆ ದೀಪಗಳನ್ನು ಬೆಳಗಿಸಿ, ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಈ ಮೂಲಕ ಆಡಳಿತ ಮಂಡಳಿಯವರು ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.























