ಮಡಿಕೇರಿ, NEWS DESK ನ.11: ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳ ಸಮಸ್ಯೆಗಳು ಹಾಗೂ ಬಾಲಕಾರ್ಮಿಕ ನಿಷೇಧ ಕಾಯ್ದೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವು ನವೆಂಬರ್ 17ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ), ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.
ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ಹಾಗೂ ತರಬೇತಿ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ಪ್ರತಿನಿಧಿಗಳು ಹಾಗೂ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ಕೃಷಿ, ಶಿಕ್ಷಣ, ಸಮಾಜ ಕಲ್ಯಾಣ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.






















