ಮಡಿಕೇರಿ, NEWS DESK ನ.12: ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅಂಗಾಂಗ ದಾನ ಮಾಡಿದ ಮಡಿಕೇರಿಯ ಚಾಮುಂಡೇಶ್ವರಿ ನಗರದ ಯೋಗೇಶ್ ಅವರ ಮನೆಗೆ ಗುರುವಾರ ಸಮಾಜಸೇವಕ ಪ್ರಸನ್ನ ಎಡಿಕೇರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಘಟನೆಯ ಕುರಿತು ಕುಟುಂಬಸ್ಥರಿಂದ ಮಾಹಿತಿ ಪಡೆದ ಅವರು, ಯೋಗೇಶ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ತೋರಿದ ಮಾನವೀಯ ಕಾರ್ಯವನ್ನು ಶ್ಲಾಘಿಸಿದರು.
ಯೋಗೇಶ್ ಅವರ ಅಂಗಾಂಗಗಳು ಇತರರ ಬದುಕಿಗೆ ಬೆಳಕಾಗಿವೆ. ಇಂತಹ ಮಹತ್ಕಾರ್ಯವನ್ನು ಎಲ್ಲರಿಂದಲೂ ಮಾಡಲು ಸಾಧ್ಯವಿಲ್ಲ. ಯೋಗೇಶ್ ಅವರು ನಮ್ಮಿಂದ ದೂರವಾಗಿರಬಹುದು, ಆದರೆ ಅಂಗಾಂಗ ದಾನದ ಮೂಲಕ ಅವರ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯಲಿದೆ ಎಂದು ಹೇಳಿದರು.
ಯೋಗೇಶ್ ಅವರಿಗೆ ಮೆದುಳು ನಿಷ್ಕ್ರಿಯಗೊಂಡ ಸಂದರ್ಭದಲ್ಲಿ ಘಟನೆ ನಡೆದ ಒಂದು ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಶಸ್ತ್ರಚಿಕಿತ್ಸೆ ನಡೆಸಿದ್ದರೆ ಅವರ ಜೀವ ಉಳಿಸಬಹುದಿತ್ತು ಎಂದು ಕುಟುಂಬಸ್ಥರು ಇದೇ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ರಾತ್ರಿ ವೇಳೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ತಜ್ಞ ವೈದ್ಯರು ಲಭ್ಯವಿಲ್ಲದಿರುವ ಕುರಿತು ಮಾಹಿತಿ ಪಡೆದ ಪ್ರಸನ್ನ ಎಡಿಕೇರಿ ಅವರು, ಮಡಿಕೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ ಅವರನ್ನು ಭೇಟಿಯಾಗಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಿದರು.
ರಾತ್ರಿ ವೇಳೆಯಲ್ಲಿಯೂ ತಜ್ಞ ವೈದ್ಯರು ಆಸ್ಪತ್ರೆಯಲ್ಲಿ ಲಭ್ಯವಿರುವಂತೆ ವ್ಯವಸ್ಥೆ ಮಾಡಬೇಕು. ಇದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ. ಅಲ್ಲದೆ, ರೋಗಿಗಳು ವೈದ್ಯರ ಚೀಟಿ ಪಡೆಯಲು ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಬೇಕು. ಕೆಲವು ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಪ್ರಸನ್ನ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಸರ್ಜನ್ ಡಾ. ನಂಜುಂಡಯ್ಯ ಅವರು, ಈಗಾಗಲೇ ತಜ್ಞ ವೈದ್ಯರು ರಾತ್ರಿ ವೇಳೆಯಲ್ಲಿಯೂ ಆಸ್ಪತ್ರೆಯಲ್ಲೇ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ವೈದ್ಯರ ಲಭ್ಯತೆ ಹಾಗೂ ದೂರವಾಣಿ ಸಂಪರ್ಕದ ಮಾಹಿತಿಯನ್ನು ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ವೈದ್ಯರು ರೋಗಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಕುರಿತು ಪರಿಶೀಲನೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.























