ಮಡಿಕೇರಿ, NEWS DESK ನ.12: ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಕಂಪನ್ನು ಮನೆಮನೆಗೂ ಪಸರಿಸುವ ಆಶಯದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೂರನೇ ವರ್ಷದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.21ರಂದು ಮರಗೋಡಿನಲ್ಲಿ ಅದ್ಧೂರಿ ‘ಕನ್ನಡ ಹಬ್ಬ’ ಆಯೋಜಿಸಲಾಗಿದೆ ಎಂದು ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ.
ಮರಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿರುವ ಕನ್ನಡ ಹಬ್ಬವು ಕನ್ನಡಾಭಿಮಾನ, ನಾಡಪ್ರೇಮ ಹಾಗೂ ಸಾಂಸ್ಕೃತಿಕ ವೈಭವದ ಸಂಗಮವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ನ.21ರಂದು ಬೆಳಿಗ್ಗೆ 8.30ಕ್ಕೆ ವಿವಿಧ ಕಲಾತಂಡಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಕನ್ನಡಾಭಿಮಾನಿಗಳ ಪಾಲ್ಗೊಳ್ಳುವಿಕೆಯಲ್ಲಿ ಭವ್ಯ ಕನ್ನಡ ಮೆರವಣಿಗೆ ನಡೆಯಲಿದೆ.
ಮೆರವಣಿಗೆಯ ಬಳಿಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರಿಂದ ರಾಷ್ಟ್ರಧ್ವಜಾರೋಹಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಂದ ನಾಡಧ್ವಜಾರೋಹಣ ನೆರವೇರಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ಕನ್ನಡ ನಾಡು, ನುಡಿ, ಸಾಹಿತ್ಯ, ಕಲೆ ಮತ್ತು ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು.
ಇದೇ ಸಂದರ್ಭದಲ್ಲಿ ಸ್ಮರಣ ಸಂಚಿಕೆಯ ಮುಖಪುಟ ಅನಾವರಣ ಹಾಗೂ ಕೊಡಗಿನ ಹಿರಿಯ ಸಾಹಿತಿ ಕಿಗ್ಗಾಲು ಎಸ್. ಗಿರೀಶ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೂ ನಡೆಯಲಿದೆ.
ಕನ್ನಡ ಹಬ್ಬದ ಅಂಗವಾಗಿ ಜಾದೂ ಪ್ರದರ್ಶನ, ವೈವಿಧ್ಯಮಯ ನೃತ್ಯ ಪ್ರದರ್ಶನಗಳು, ಸುಶ್ರಾವ್ಯ ಹಾಡುಗಾರಿಕೆ ಸೇರಿದಂತೆ ಹಲವು ಮನರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮಂದ್ರೀರ ಮೋಹನ್ ದಾಸ್, ಕಟ್ಟೆಮನೆ ಜನಾರ್ದನ, ಮಠದಮನೆ ಧನಂಜಯ, ಕಾನಡ್ಕ ಶ್ಯಾಮ್ ಹಾಗೂ ಭಾನುಪ್ರಿಯ ಮರಗೋಡು ಉಪಸ್ಥಿತರಿದ್ದರು.























