ವಿರಾಜಪೇಟೆ, NEWS DESK ನ.12: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ವಹಿಸುವ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು.
ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೋಷಕ–ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ದಾಖಲಿಸಿದ ಮಾತ್ರಕ್ಕೆ ಅವರ ಜವಾಬ್ದಾರಿ ಮುಗಿಯುವುದಿಲ್ಲ. ಬದಲಾಗಿ, ಶೈಕ್ಷಣಿಕ ಅವಧಿಯಲ್ಲಿ ಮಕ್ಕಳ ಹಾಜರಾತಿ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಹಾಗೂ ಒಟ್ಟಾರೆ ಶೈಕ್ಷಣಿಕ ಪ್ರಗತಿಯನ್ನು ಆಗಾಗ್ಗೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇ ಪೋಷಕ–ಶಿಕ್ಷಕರ ಸಭೆಯ ಮುಖ್ಯ ಉದ್ದೇಶವಾಗಿದೆ. ಸಂಸ್ಥೆಯ ವತಿಯಿಂದ ಮೌಲ್ಯಯುತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಬೆಳೆಸಲು ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ. ಪೋಷಕರು ಮನೆಯಲ್ಲಿಯೂ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ ಪ್ರೋತ್ಸಾಹಿಸಿದಾಗ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸಂಸ್ಥೆಯ ವತಿಯಿಂದ ಬಸ್ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದ್ದು, ಪೋಷಕರ ಅಭಿಪ್ರಾಯ ಹಾಗೂ ಬೇಡಿಕೆಗೆ ಅನುಗುಣವಾಗಿ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಅಲ್ಲದೆ, ಡಿಸೆಂಬರ್ ತಿಂಗಳಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ಕಾಲೇಜಿನ ಕನ್ನಡ ಉಪನ್ಯಾಸಕ ಹೇಮಂತ್ ಮಾತನಾಡಿ, ಪೋಷಕರು ಕನಿಷ್ಠ ತಿಂಗಳಿಗೊಮ್ಮೆಯಾದರೂ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಸಮಾಲೋಚನೆ ನಡೆಸಬೇಕು. ವಿದ್ಯಾರ್ಥಿಗಳ ಹಾಜರಾತಿಯನ್ನು ಪರಿಶೀಲಿಸುವುದರ ಜೊತೆಗೆ ಅವರು ಸರಿಯಾದ ಮಾರ್ಗದಲ್ಲಿ ಸಾಗಲು ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲು ಪೋಷಕರ ಪಾತ್ರ ಹಾಗೂ ಸಹಕಾರ ಅತ್ಯಗತ್ಯ ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿ, ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.
ಭೌತಶಾಸ್ತ್ರ ಉಪನ್ಯಾಸಕ ನೋಹ ವಿವೇಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.























