ಮಡಿಕೇರಿ, NEWS DESK ನ.12: ಯುವಜನರಲ್ಲಿ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ‘ವಿಕಸಿತ ಭಾರತ ಯುವ ಸಂಸತ್ತು’ ಕಾರ್ಯಕ್ರಮ ನಡೆಯಿತು.
ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ ಕೇಂದ್ರ ಕೊಡಗು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಯುವ ನಾಯಕರು ಭಾಗವಹಿಸಿ ರಾಷ್ಟ್ರದ ಅಭಿವೃದ್ಧಿ ಮತ್ತು ಸಮಕಾಲೀನ ವಿಚಾರಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ತಿಳಿಸಿದರು.
ಮೈ ಭಾರತ್ ಕೊಡಗು ಜಿಲ್ಲಾ ಯುವಜನ ಅಧಿಕಾರಿ ಪಿ. ಅಖಿಲ್ ಮಾತನಾಡಿ, ಯುವಜನರ ಸಹಭಾಗಿತ್ವದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಹೊಸ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಮೇರಾ ಯುವ ಭಾರತ್’ ಪರಿಕಲ್ಪನೆಯನ್ನು ಜಾರಿಗೊಳಿಸಿದೆ. ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳ ಮೂಲಕ ಯುವಜನರ ಆಲೋಚನೆಗಳಿಗೆ ವೇದಿಕೆ ಕಲ್ಪಿಸಲಾಗುತ್ತಿದೆ. ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಸ್ಪರ್ಧಿಗಳಿಗೆ 2027ರ ಜನವರಿ 10ರಿಂದ 12ರವರೆಗೆ ನವದೆಹಲಿಯ ಸಂಸತ್ತಿನಲ್ಲಿ ತಮ್ಮ ಆಲೋಚನೆಗಳನ್ನು ಮಂಡಿಸಲು ಅವಕಾಶವಿದೆ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ ಅವರು ವಿದ್ಯಾರ್ಥಿಗಳು ಶಿಕ್ಷಣಕ್ಕೆ ಆದ್ಯತೆ ನೀಡುವುದರೊಂದಿಗೆ ತಂದೆ-ತಾಯಿ, ಗುರುಹಿರಿಯರನ್ನು ಗೌರವಿಸಬೇಕು. ನಶಾಮುಕ್ತ ಭಾರತ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಯುವಜನರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ವಕೀಲರಾದ ಕೆ.ಎಂ. ಮೀನಾಕುಮಾರಿ ಮಾತನಾಡಿ, ಸ್ಪರ್ಧೆಯಲ್ಲಿ ಗೆಲುವು ಅಥವಾ ಸೋಲು ಮುಖ್ಯವಲ್ಲ, ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇಂತಹ ವೇದಿಕೆಗಳು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಆಲೋಚನೆಗಳನ್ನು ಹೊರತರಲು ಸಹಕಾರಿಯಾಗುತ್ತವೆ ಎಂದರು.
ಸ್ಪರ್ಧೆಯ ತೀರ್ಪುಗಾರರಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್, ಆಂಗ್ಲ ಉಪನ್ಯಾಸಕಿ ಅನನ್ಯ ಮಧುಸೂದನ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಿಂದಿ ಉಪನ್ಯಾಸಕಿ ಕೆ.ಎಚ್. ಖುರ್ಷಿದಾ ಬಾನು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಎಂ.ಬಿ. ದೀಪ ಕಾರ್ಯನಿರ್ವಹಿಸಿದರು.
ಸ್ಪರ್ಧಾ ಫಲಿತಾಂಶ: ಪೊನ್ನಂಪೇಟೆಯ ಸಿಐಟಿ ಕಾಲೇಜಿನ ವಿದ್ಯಾರ್ಥಿನಿ ಅದ್ವಿಕಾ ಪ್ರಥಮ ಸ್ಥಾನ ಗಳಿಸಿದರೆ, ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವಿದ್ಯಾರ್ಥಿನಿ ಎಂ.ಐ. ಶಬೀಬ ದ್ವಿತೀಯ ಹಾಗೂ ಪೊನ್ನಂಪೇಟೆಯ ಸಿಐಟಿ ಕಾಲೇಜಿನ ಕೆ.ಆರ್. ಬವಿತ ತೃತೀಯ ಸ್ಥಾನ ಪಡೆದರು. ಮೂವರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ವಿ.ವಿ. ಶಿವಪ್ಪ ನಿರೂಪಿಸಿದರು. ಕನ್ನಡ ಉಪನ್ಯಾಸಕಿ ಕೆ. ಪೂರ್ಣಿಮಾ ಸ್ವಾಗತಿಸಿದರು. ಉಪನ್ಯಾಸಕಿ ಪಿ.ಆರ್. ಮುಕ್ತಕೇಶಿ ವಂದಿಸಿದರು.
















