ಮಡಿಕೇರಿ, NEWS DESK ನ.13: ಕೃಷಿಕ ಸಮುದಾಯದ ಹಿತರಕ್ಷಣೆಗಾಗಿ ಶತಮಾನಗಳಿಂದ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳ ಸಹಕಾರ ತತ್ತ್ವಗಳನ್ನು ಪ್ರಚುರಪಡಿಸುವ ಉದ್ದೇಶದಿಂದ ನ.14ರಿಂದ 20ರವರೆಗೆ ಕೊಡಗಿನ ವಿವಿಧೆಡೆ 73ನೇ ಸಹಕಾರ ಸಪ್ತಾಹದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ಯು. ರಾಬಿನ್ ದೇವಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನ.20ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಂಪಿಗೆದಾಳು ಗ್ರಾಮದ ಎಸ್.ಕೆ. ವೀರಪ್ಪ ಅವರಿಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಕುಂಡ್ಯೋಳಂಡ ಪಿ. ಮುದ್ದಯ್ಯ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಮುಗುಟಗೇರಿಯ ಮುದ್ದಿಯಡ ಎ. ಸೋಮಯ್ಯ ಅವರಿಗೆ ಶ್ರೇಷ್ಠ ಸಹಕಾರಿ ಪ್ರಶಸ್ತಿ ನೀಡಲಾಗುವುದು. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಗ್ರಾಮದ ಲೋಕೇಶ್ವರಿ ಗೋಪಾಲ್ ಅವರಿಗೆ ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಸಹಕಾರ ಸಪ್ತಾಹ ಉದ್ಘಾಟನೆ: ಕೊಡಗು ಜಿಲ್ಲಾ ಸಹಕಾರ ಯೂನಿಯನ್, ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸಹಕಾರ ಸಪ್ತಾಹವನ್ನು ಆಯೋಜಿಸಲಾಗಿದೆ. ನ.14ರಂದು ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದೊಂದಿಗೆ ಸಪ್ತಾಹಕ್ಕೆ ಚಾಲನೆ ನೀಡಲಾಗುವುದು.
ನ.15ರಂದು ಮಡಿಕೇರಿಯ ಮಹದೇವಪೇಟೆಯ ಬಸಪ್ಪ ಶಿಶು ವಿಹಾರದ ಮಹಿಳಾ ಸಹಕಾರ ಸಂಘದ ಸಭಾಂಗಣದಲ್ಲಿ ‘ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಪ್ರಕ್ರಿಯೆಗಳು ಸಹಕಾರ ಸಂಸ್ಥೆಗಳ ಬೆಳವಣಿಗೆಗೆ ಪೂರಕ’ ಎಂಬ ವಿಷಯದಡಿ ಕಾರ್ಯಕ್ರಮ ನಡೆಯಲಿದೆ.
ಹುದಿಕೇರಿಯಲ್ಲಿ ನೇತ್ರ, ದಂತ ತಪಾಸಣಾ ಶಿಬಿರ: ನ.16ರಂದು ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ‘ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಮೂಲಕ ಸಹಕಾರ ಸಂಸ್ಥೆಗಳಲ್ಲಿ ಪರಿಣಾಮಕಾರಿ ಬದಲಾವಣೆ’ ಎಂಬ ವಿಷಯದಡಿ ಸಪ್ತಾಹ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಉಚಿತ ನೇತ್ರ ಹಾಗೂ ದಂತ ತಪಾಸಣೆ, ಚಿಕಿತ್ಸೆ ಮತ್ತು ಸಲಹಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಪ್ರತಿಮೆ ನಿರ್ಮಾಣಕ್ಕೆ ಶಂಕುಸ್ಥಾಪನೆ: ನ.17ರಂದು ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರ್ಯಾಂಡ್ ನಿರ್ಮಾಣ’ ಎಂಬ ವಿಷಯದಡಿ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಸೋಮವಾರಪೇಟೆ ತಾಲ್ಲೂಕಿನ ತಲ್ತರೆಶೆಟ್ಟಳ್ಳಿಯಲ್ಲಿ 1905ರ ಮೇ 22ರಂದು ದೇಶದ ಎರಡನೇ ಸಹಕಾರ ಸಂಘದ ಸ್ಥಾಪನೆಗೆ ಕಾರಣರಾದ ಕುರಾದ ಗೌಡ್ನಮನೆ ಪಿ. ದೊಡ್ಡಯ್ಯ ಅವರ ಪ್ರತಿಮೆ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ನ.18ರಂದು ರುದಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ‘ಸಾರ್ವಜನಿಕ-ಖಾಸಗಿ ಸಹಕಾರಿ ಪಾಲುದಾರಿಕೆಯನ್ನು ಬಲಪಡಿಸುವುದು’ ಎಂಬ ವಿಷಯದಡಿ ಕಾರ್ಯಕ್ರಮ ನಡೆಯಲಿದೆ.
ನ.19ರಂದು ತೊರೆನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅಲ್ಲಿನ ರೈತ ಸಮುದಾಯ ಭವನದಲ್ಲಿ ‘ಮಹಿಳೆಯರು, ಯುವಜನರು ಹಾಗೂ ಸಮಾಜದ ದುರ್ಬಲ ವರ್ಗಗಳ ಸಹಕಾರ ಕ್ಷೇತ್ರದಲ್ಲಿನ ಪಾಲ್ಗೊಳ್ಳುವಿಕೆ’ ಎಂಬ ವಿಷಯದಡಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ: ನ.20ರಂದು ಮಡಿಕೇರಿಯ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉನ್ನತಿ ಭವನದಲ್ಲಿ ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದಡಿ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಬಿನ್ ದೇವಯ್ಯ ತಿಳಿಸಿದರು.
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ. ಬಾಂಡ್ ಗಣಪತಿ ಮಾತನಾಡಿ, ದೇಶದ ಮೊದಲ ಸಹಕಾರ ಸಂಘವು 1905ರ ಮೇ 8ರಂದು ಗದಗ ಜಿಲ್ಲೆಯ ಕಣಗಿನಹಾಳದಲ್ಲಿ ದಿವಂಗತ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರ ನೇತೃತ್ವದಲ್ಲಿ ಆರಂಭವಾಯಿತು. ಅಂದಿನಿಂದ ಸಹಕಾರಿ ಚಳವಳಿ 121 ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಸಹಕಾರ ಕ್ಷೇತ್ರವು ಕೃಷಿಕ ಸಮುದಾಯಕ್ಕೆ ನೆರವಾಗುವುದರ ಜೊತೆಗೆ ವಾಣಿಜ್ಯ ಬ್ಯಾಂಕ್‌ಗಳಿಗೂ ಪೈಪೋಟಿ ನೀಡುವ ಮಟ್ಟಕ್ಕೆ ಬೆಳೆದು ನಿಂತಿರುವುದು ಸಂತಸದ ಸಂಗತಿ ಎಂದರು.
ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಎಚ್.ಕೆ. ಮಾದಪ್ಪ, ನಿರ್ದೇಶಕರಾದ ಬಲ್ಲಾರಂಡ ಮಣಿ ಉತ್ತಪ್ಪ, ಎಂ.ಪಿ. ಸುಬ್ಬಯ್ಯ ಹಾಗೂ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.
















