ಸುಂಟಿಕೊಪ್ಪ, NEWS DESK ನ. 14: ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದ ಶಾಲಾ ಶಿಕ್ಷಕಿ ಲಿಯೋನಾ, ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರು ಮಕ್ಕಳನ್ನು ಅಪಾರವಾಗಿ ಪ್ರೀತಿಸುತ್ತಿದ್ದರು. ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರ ಆದರ್ಶಗಳನ್ನು ಮಕ್ಕಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಶಿಕ್ಷಣ ಪಡೆದು ಭವಿಷ್ಯದಲ್ಲಿ ದೇಶದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.
ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸುಂಟಿಕೊಪ್ಪದ ದಾನಿ ಹಾಗೂ ಸಮಾಜಸೇವಕ ಇಬ್ರಾಹಿಂ ಬಾಪ್ಪು ಅವರು ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಶಾಂತ ಹೆಗ್ಡೆ ವಹಿಸಿದ್ದರು. ಈ ಸಂದರ್ಭ ಶಾಲೆಯ ಸಹಶಿಕ್ಷಕರಾದ ಪ್ರಕಾಶ್, ಸುನಂದ, ಚಿತ್ರಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು.
















