ಕುಶಾಲನಗರ, NEWS DESK ನ.14: ಪರಿಸರ ಮತ್ತು ಪ್ರಕೃತಿಯ ಬಗ್ಗೆ ಪ್ರತಿಯೊಬ್ಬರೂ ಅರಿವು ಹಾಗೂ ಮಾಹಿತಿ ಹೊಂದಿರಬೇಕು ಎಂದು ಕುಶಾಲನಗರ ಅರಣ್ಯ ಉಪವಲಯ ಅರಣ್ಯಾಧಿಕಾರಿ ಉಮೇಶ್ ಅಭಿಪ್ರಾಯಪಟ್ಟರು.
ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ಅರಣ್ಯ ಇಲಾಖೆ ಹಾಗೂ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ, ಶಾಲೆಯ ಇಕೋ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ ವೃಕ್ಷಮಾತೆ ಡಾ. ಸಾಲುಮರದ ತಿಮ್ಮಕ್ಕ ಸ್ಮರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರತಿಯೊಬ್ಬರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿ ಉತ್ತಮ ಪರಿಸರ ನಿರ್ಮಾಣಕ್ಕೆ ಶ್ರಮಿಸಬೇಕು. ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಸಂರಕ್ಷಣೆ ಒಂದು ದಿನದ ಆಚರಣೆಯಾಗದೆ ಪ್ರತಿನಿತ್ಯದ ಜೀವನಶೈಲಿಯಾಗಬೇಕು ಎಂದು ಹೇಳಿದರು.
ತಮ್ಮ ಜೀವನದ ಕೊನೆಯವರೆಗೂ ಮರಗಿಡಗಳ ಪೋಷಣೆಗೆ ಜೀವನವನ್ನೇ ಮುಡಿಪಾಗಿಟ್ಟು ವೃಕ್ಷಮಾತೆಯಾಗಿ ಗುರುತಿಸಿಕೊಂಡ ಸಾಲುಮರದ ತಿಮ್ಮಕ್ಕ ಅವರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಕನಿಷ್ಠ ಒಂದು ಗಿಡವನ್ನಾದರೂ ನೆಟ್ಟು ಅದನ್ನು ಪೋಷಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ನಿವೃತ್ತ ಯೋಧ ಹಾಗೂ ಪರಿಸರ ರಕ್ಷಣಾ ಬಳಗದ ಪ್ರಮುಖರಾದ ಕರುಂಬಯ್ಯ ಎನ್.ಎಸ್. ಮಾತನಾಡಿ, ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪ್ರಕೃತಿಯೊಂದಿಗೆ ಬೆರೆತು ಬದುಕುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ ನಾಗರತ್ನ ಮಾತನಾಡಿ, ನಗರೀಕರಣದ ಪರಿಣಾಮ ಸ್ವಾಭಾವಿಕ ಸಸ್ಯಸಂಕುಲ ಕ್ಷಣಕ್ಷಣಕ್ಕೂ ನಾಶವಾಗುತ್ತಿದೆ. ಇದರಿಂದ ಮನುಕುಲದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಸಾಲುಮರದ ತಿಮ್ಮಕ್ಕ ಅವರಂತೆ ಪ್ರತಿಯೊಬ್ಬರಲ್ಲೂ ಪರಿಸರ ಕಾಳಜಿ ಬೆಳೆಯಬೇಕು. ಪ್ರಕೃತಿಯಲ್ಲಿ ಕೊಡು-ಕೊಳ್ಳುವ ನೀತಿಯನ್ನು ಪಾಲಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಲಾ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ಗಿಡ ನೆಡಲಾಯಿತು. ವಿದ್ಯಾರ್ಥಿನಿಯರಾದ ಪೂರ್ವಿ ಮತ್ತು ದುರ್ಗಾಪರಮೇಶ್ವರಿ ಪರಿಸರ ಸಂರಕ್ಷಣೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಬಳಿಕ ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಸದಾಶಿವ ಎಸ್. ಪಲ್ಯದ್, ಎ.ಸಿ. ಮಂಜುನಾಥ್ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ನಿವೃತ್ತ ಶಿಕ್ಷಕ ಊ.ರ. ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಕಾವೇರಿ ಪರಿಸರ ಸಂರಕ್ಷಣಾ ಬಳಗದ ವನಿತಾ ಚಂದ್ರಮೋಹನ್ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಸಬಲಂ ಭೋಜಣ್ಣ ರೆಡ್ಡಿ ವಂದಿಸಿದರು.
















