ಕುಶಾಲನಗರ, NEWS DESK ನ. 15: ಸ್ಪಷ್ಟ ಗುರಿಯನ್ನು ಹೊಂದಿ, ಸೂಕ್ತ ಯೋಜನೆ ರೂಪಿಸಿಕೊಂಡು ಅದನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆಗ ಮಾತ್ರ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉದ್ಯಮಿ ಟಿ.ಎಲ್. ಪ್ರವೀಣ್ ಹೇಳಿದರು.
ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ನ ವಾರ್ಷಿಕ ಮಹಾಸಭೆಯಲ್ಲಿ ಬಿಸಿನೆಸ್ ಎಕ್ಸಲೆನ್ಸ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಜಗತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಉದ್ಯಮಿಗಳು ಕಾಲಕ್ಕೆ ತಕ್ಕಂತೆ ತಮ್ಮ ಉದ್ಯಮಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು. ಹುಟ್ಟೂರಿನಲ್ಲಿ ಉದ್ಯಮಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಮತ್ತಷ್ಟು ಪ್ರೇರಣೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಸೂರು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಅಧ್ಯಕ್ಷ ಡಾ. ಲಿಂಗರಾಜು ಮಾತನಾಡಿ, ಕೊಡಗು ಮತ್ತು ಮೈಸೂರು ಜಿಲ್ಲೆಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಕೊಡಗು ಜಿಲ್ಲೆಯಲ್ಲಿ ಕೈಗಾರಿಕೆ ಹಾಗೂ ದೊಡ್ಡ ಉದ್ಯಮಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮಾತನಾಡಿ, ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿಯು ಜಿಲ್ಲೆಯಲ್ಲಿ ಸದಾ ಕ್ರಿಯಾಶೀಲವಾಗಿ ಜನಪರ ಕಾರ್ಯಗಳನ್ನು ನಿರ್ವಹಿಸುತ್ತಿರುವುದು ಸಂತಸದ ವಿಚಾರ ಎಂದರು.
ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಗಿರೀಶ್ ಗಣಪತಿ ಮಾತನಾಡಿ, ಸಂಘವು 2027ರ ಜನವರಿ 10ರಂದು ಬೆಳ್ಳಿ ಹಬ್ಬ ಆಚರಿಸಿಕೊಳ್ಳಲಿದ್ದು, ಜಿಲ್ಲೆಯ ಎಲ್ಲ ವರ್ತಕ ಬಂಧುಗಳು ಕಾರ್ಯಕ್ರಮಕ್ಕೆ ಸರ್ವ ರೀತಿಯಲ್ಲೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ಆವರ್ತಿಯ ಯೋಗೀಶ್ ಕುಟುಂಬ ಸಂಸ್ಥೆಗೆ ಉಚಿತವಾಗಿ ನೀಡಿರುವ ನಿವೇಶನದಲ್ಲಿ ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗೆ ಸದಸ್ಯರು ಸಹಕಾರ ನೀಡಬೇಕು ಎಂದು ತಿಳಿಸಿದರು.
ಅಲ್ಲದೆ, ಡಿಸೆಂಬರ್ 18, 19 ಮತ್ತು 20ರಂದು ಎರಡನೇ ವರ್ಷದ ಕನ್ಸ್ಯೂಮರ್ ಫೇರ್ ಆಯೋಜಿಸಲಾಗುವುದು. ಈ ಎಕ್ಸ್ಪೋಗೆ ರಾಜ್ಯ ಹಾಗೂ ಕೇಂದ್ರ ಸಚಿವರನ್ನು ಆಹ್ವಾನಿಸಿ, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿ ಮನವಿ ಮಾಡಲಾಗುವುದು ಎಂದರು. ಕಳೆದ ಒಂದು ವರ್ಷದಲ್ಲಿ ಚೇಂಬರ್ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಂಡ ವಿವಿಧ ಕಾರ್ಯಗಳ ಮಾಹಿತಿಯನ್ನೂ ಸಭೆಯಲ್ಲಿ ಹಂಚಿಕೊಂಡರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಬಿ.ಆರ್. ನಾರಾಯಣ ಅವರನ್ನು ಗೌರವಿಸಲಾಯಿತು.
ಕಾರ್ಯದರ್ಶಿ ಚಿತ್ರ ರಮೇಶ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಎನ್.ವಿ. ಬಾಬು ಲೆಕ್ಕಪತ್ರ ಮಂಡಿಸಿದರು.
ಮೈಸೂರು ಚೇಂಬರ್ ಕಾರ್ಯದರ್ಶಿ ಶಿವಾಜಿ ರಾವ್, ಸ್ಥಾನೀಯ ಸಮಿತಿಯ ನಿರ್ದೇಶಕರಾದ ಎಸ್.ಕೆ. ಸತೀಶ್, ಪಿ.ಎಂ. ಮೋಹನ್, ಅಶ್ವಿನಿ ರೈ, ಮುಖೇಶ್ ಜೈನ್, ಹೆಚ್.ಎಂ. ಚಂದ್ರು, ಕೆ.ಎನ್. ದೇವರಾಜ್, ಜನಾರ್ಧನ ಪ್ರಭು ಸೇರಿದಂತೆ ಹಲವು ವರ್ತಕರು ಉಪಸ್ಥಿತರಿದ್ದರು.
















