ಮಡಿಕೇರಿ, NEWS DESK ನ. 16: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸೇನಾ ತರಬೇತಿ ನೀಡಲು ರಾಜ್ಯ ಸರಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಹೊರಡಿಸಿರುವ ಟೆಂಡರ್ ಅಧಿಸೂಚನೆಯನ್ನು ಸಂವಿಧಾನದ ಸಮಾನತೆ ಮತ್ತು ರಾಷ್ಟ್ರದ ಏಕತೆಯ ದೃಷ್ಟಿಯಿಂದ ತಕ್ಷಣ ರದ್ದುಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ನ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ನ ಹಿರಿಯರಾದ ಶ್ರೀ ಸೋಮನಾಥ ಸ್ವಾಮೀಜಿ, ರಾಷ್ಟ್ರಕವಿ ಕುವೆಂಪು ಅವರು ಸಾರಿದ ಸಂದೇಶದಂತೆ ಕರ್ನಾಟಕ ರಾಜ್ಯವು ಸರ್ವಜನಾಂಗಗಳ ಶಾಂತಿಯ ತೋಟವಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿ ದೇಶಕ್ಕೆ ಮಾದರಿಯಾಗುವ ಆಡಳಿತ ನೀಡಬೇಕೇ ಹೊರತು, ಮತಬ್ಯಾಂಕ್ ರಾಜಕಾರಣಕ್ಕಾಗಿ ಯುವಜನರನ್ನು ಧರ್ಮದ ಆಧಾರದ ಮೇಲೆ ಪ್ರತ್ಯೇಕಿಸಬಾರದು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ-2022 ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯಬಾರದು ಅಥವಾ ದುರ್ಬಲಗೊಳಿಸಬಾರದು. ಎರಡೂ ಕಾಯ್ದೆಗಳನ್ನು ಯಥಾವತ್ತಾಗಿ ಮುಂದುವರಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆಯು ಯಾವುದೇ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ ಬಲವಂತ, ವಂಚನೆ ಹಾಗೂ ಆಮಿಷಗಳ ಮೂಲಕ ನಡೆಯುವ ಕಾನೂನುಬಾಹಿರ ಮತಾಂತರಗಳನ್ನು ತಡೆಯುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ರೈತರ ಹಿತಾಸಕ್ತಿ ಹಾಗೂ ಪಶುಸಂಪತ್ತಿನ ರಕ್ಷಣೆಯ ದೃಷ್ಟಿಯಿಂದ ಮಹತ್ವದ್ದಾಗಿದೆ. ಗೋವು ಭಾರತೀಯ ಕೃಷಿ ಪದ್ಧತಿಯ ಪ್ರಮುಖ ಭಾಗವಾಗಿದ್ದು, ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗಳೊಂದಿಗೂ ಸಂಬಂಧ ಹೊಂದಿದೆ. ಆದ್ದರಿಂದ ಈ ಕಾಯ್ದೆಯನ್ನು ಹಿಂಪಡೆಯುವುದು ಅಥವಾ ದುರ್ಬಲಗೊಳಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಸಾಂಸ್ಕೃತಿಕ ಅಸ್ಮಿತೆ, ಸಾಮಾಜಿಕ ಸಾಮರಸ್ಯ ಮತ್ತು ಕೋಮು ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರಕಾರ ಎರಡೂ ಕಾಯ್ದೆಗಳನ್ನು ಯಥಾವತ್ತಾಗಿ ಮುಂದುವರಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡುವ ಟೆಂಡರ್ ಅಧಿಸೂಚನೆಯನ್ನು ರದ್ದುಗೊಳಿಸಬೇಕು. ಈ ಬೇಡಿಕೆಗಳನ್ನು ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರು ಗಂಭೀರವಾಗಿ ಪರಿಗಣಿಸಬೇಕು ಎಂದು ಶ್ರೀ ಸೋಮನಾಥ ಸ್ವಾಮೀಜಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ನ ಪ್ರಮುಖರಾದ ಪುದಿಯೊಕ್ಕಡ ರಮೇಶ್, ಗುರು ಪ್ರಸಾದ್, ಬಜರಂಗದಳ ಜಿಲ್ಲಾ ಸಹ ಸಂಯೋಜಕ ದುರ್ಗೇಶ್ ಭಜರಂಗ, ತಾಲೂಕು ಸಹ ಸಂಯೋಜಕ ಜೀವನ್ ಬೊಳಕಾರಂಡ ಹಾಗೂ ಆರ್.ಎನ್. ಪ್ರಸಾದ್ ಉಪಸ್ಥಿತರಿದ್ದರು.
















