ಮಡಿಕೇರಿ, NEWS DESK ನ.16 : ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ಕಾಯ್ದೆ–2022 ಹಾಗೂ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ–2020 ಗಳನ್ನು ಹಿಂಪಡೆಯುವ ಸರ್ಕಾರದ ಪ್ರಸ್ತಾಪಕ್ಕೆ ವಿಶ್ವ ಹಿಂದೂ ಪರಿಷದ್ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಸಂಬಂಧ ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ಅವರ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆ ಮತ್ತು ಗೋಸಂರಕ್ಷಣೆ ಸಮಾಜದ ನಂಬಿಕೆ, ಭಾವನೆ ಹಾಗೂ ಸಂವಿಧಾನಬದ್ಧ ಹಕ್ಕುಗಳಿಗೆ ಸಂಬಂಧಿಸಿದ ಮಹತ್ವದ ವಿಚಾರಗಳಾಗಿವೆ. ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರುವ ನಿರ್ಧಾರಗಳನ್ನು ಸರ್ಕಾರ ಕೈಗೊಳ್ಳಬಾರದು ಎಂದು ಸಂಘಟನೆ ಮನವಿಯಲ್ಲಿ ಒತ್ತಾಯಿಸಿದೆ.
ಎರಡೂ ಕಾಯ್ದೆಗಳನ್ನು ಮುಂದುವರಿಸಬೇಕು ಹಾಗೂ ಜನರ ಭಾವನೆಗಳಿಗೆ ವಿರುದ್ಧವಾದ ನಿರ್ಧಾರಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿರುವ ಸಂಘಟನೆ, ಈ ವಿಚಾರದಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದೆ.
ಒಂದು ವೇಳೆ ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಲ್ಲಿ ಕಾನೂನುಬದ್ಧ ಮತ್ತು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಶ್ರೀ ಸೋಮನಾಥನಂದ ಪುರಿ ಸ್ವಾಮೀಜಿ, ವಿಶ್ವ ಹಿಂದೂ ಪರಿಷದ್ ಕೊಡಗು ಜಿಲ್ಲಾ ಅಧ್ಯಕ್ಷ ರಮೇಶ್ ಪುದಿಯೊಕ್ಕಡ, ಕಾರ್ಯದರ್ಶಿ ಸಂತೋಷ್ ಕುಶಾಲನಗರ ಸೇರಿದಂತೆ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.
















