ಮೈಸೂರು, NEWS DESK ನ.17: ಮೈಸೂರಿನ ಎಲ್ಐಸಿ ವೃತ್ತದಲ್ಲಿ (ಅರ್ಜುನ ವೃತ್ತ) ದಸರಾ ಆನೆ ಅರ್ಜುನನ ಸ್ಮರಣಾರ್ಥ ಸ್ಮಾರಕ ನಿರ್ಮಿಸುವ ಯೋಜನೆಗೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಶಾಸಕ ತನ್ವೀರ್ ಸೇಠ್ ಹಾಗೂ ಮೈಸೂರು ಮಹಾನಗರ ಪಾಲಿಕೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸ್ಮಾರಕದ ಸಮಗ್ರ ವಿವರ ಯೋಜನಾ ವರದಿ (ಡಿಪಿಆರ್), ವಿನ್ಯಾಸ, ಅನುಷ್ಠಾನ ಕಾರ್ಯತಂತ್ರ ಹಾಗೂ ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳ ಕುರಿತು ಚರ್ಚಿಸಲಾಯಿತು.
ಅರ್ಜುನ ಮೈಸೂರಿನ ಸಾಂಸ್ಕೃತಿಕ ಗುರುತು ಹಾಗೂ ದಸರಾ ಪರಂಪರೆಯ ಅವಿಭಾಜ್ಯ ಅಂಗವಾಗಿದ್ದ. ಆತನ ನೆನಪನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಉದ್ದೇಶದಿಂದ ಸ್ಮಾರಕ ನಿರ್ಮಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.
ಯೋಜನೆಯ ಅನುಷ್ಠಾನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ತನ್ವೀರ್ ಸೇಠ್ ಭರವಸೆ ನೀಡಿದರು.
















