ಮಡಿಕೇರಿ, NEWS DESK ನ.17: ಮಕ್ಕಳಿಗೆ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳ ಸಮಸ್ಯೆಗಳು ಹಾಗೂ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಂಬಂಧಪಟ್ಟ ಇಲಾಖೆಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ನಡೆಸುವ ಮೂಲಕ ಬಾಲಕಾರ್ಮಿಕ ಪದ್ಧತಿಯ ನೈಜ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ತಂತ್ರಜ್ಞಾನವನ್ನು ಅವಲಂಬಿಸುವುದರ ಜೊತೆಗೆ ನೇರ ಪರಿಶೀಲನೆ ಮತ್ತು ಮಾನವೀಯ ಕಾಳಜಿಗೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ ಮಾತನಾಡಿ, ಕಾರ್ಮಿಕರ ಹಕ್ಕುಗಳು ಮತ್ತು ಸಮಸ್ಯೆಗಳ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಮಕ್ಕಳಿಂದ ದುಡಿಮೆ ಮಾಡಿಸುವ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕಿ, ಪ್ರತಿಯೊಂದು ಮಗುವಿಗೂ ಶಿಕ್ಷಣ, ಸುರಕ್ಷತೆ ಹಾಗೂ ಗೌರವಯುತ ಬದುಕು ಕಲ್ಪಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ರಾಷ್ಟ್ರೀಯ ಯೋಜನಾ ಸಂಯೋಜಕ ರಂಜಿತ್ ಪ್ರಕಾಶ್ ಮಾತನಾಡಿ, ಮಕ್ಕಳ ಸಮಗ್ರ ಅಭಿವೃದ್ಧಿ ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಉದ್ದೇಶದಿಂದ ರಾಜ್ಯದ ಐದು ಜಿಲ್ಲೆಗಳಲ್ಲಿ ಚೈಲ್ಡ್ ಡೆವಲಪ್ಮೆಂಟ್ ಪ್ಲಾಟ್ಫಾರಂ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದ್ದು, ಕೊಡಗು ಜಿಲ್ಲೆ ಕೂಡ ಆಯ್ಕೆಯಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ. ಯೋಗೇಶ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಎಂ. ಯತ್ನಟ್ಟಿ, ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಮತಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿ. ಅಂಬಿಕಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಿ.ಆರ್. ಪ್ರಸನ್ನ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕೊಡಗು ವಿದ್ಯಾಲಯದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿಯರು ನಾಡಗೀತೆ ಹಾಗೂ ವಂದೇ ಮಾತರಂ ಹಾಡಿದರು. ಹಿರಿಯ ಕಾರ್ಮಿಕ ನಿರೀಕ್ಷಕ ಶ್ರೀಧರ್ ಸ್ವಾಗತಿಸಿದರು. ಜಯಪ್ಪ ನಿರೂಪಿಸಿದರು. ಆರ್. ಶೀರಾಝ್ ಅಹ್ಮದ್ ವಂದಿಸಿದರು.
















