ಮಡಿಕೇರಿ, NEWS DESK ನ.18: ಮಳ್ಳೂರು–ಕಲ್ಲೂರು–ಹೇರೂರು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ, ಮುಂದಿನ ಮಂಗಳವಾರ ಬಸವನಹಳ್ಳಿ ಭಾಗದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.
ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯೊಂದಿಗೆ ಈಗಾಗಲೇ ಪತ್ರವ್ಯವಹಾರ ನಡೆಸಿದ್ದರೂ, ಈವರೆಗೆ ಯಾವುದೇ ಪ್ರಗತಿ ಕಂಡುಬಂದಿಲ್ಲ. ಇದರಿಂದಾಗಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಈ ಮಾರ್ಗವನ್ನು ಅವಲಂಬಿಸಿರುವ ಗ್ರಾಮಸ್ಥರು ಸಾಕಷ್ಟು ಸಂಕಷ್ಟ ಎದುರಿಸುವಂತಾಗಿದೆ.
ವಿಶೇಷವಾಗಿ ಶಾಲಾ ಮಕ್ಕಳ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ. ಹದಗೆಟ್ಟ ರಸ್ತೆಯಿಂದಾಗಿ ಶಾಲಾ ವ್ಯಾನ್ಗಳು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೋಷಕರೇ ಮಕ್ಕಳನ್ನು ಶಾಲೆಗೆ ಕರೆದೊಯ್ದು ಬಿಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮಕ್ಕಳ ಸುರಕ್ಷತೆಯ ಬಗ್ಗೆಯೂ ಆತಂಕ ವ್ಯಕ್ತವಾಗಿದೆ.
ಕಾಮಗಾರಿ ವಿಳಂಬಕ್ಕೆ ನಿಖರ ಕಾರಣವನ್ನು ಸಂಬಂಧಪಟ್ಟ ಅಧಿಕಾರಿಗಳು ಬಹಿರಂಗಪಡಿಸಬೇಕು. ಗುತ್ತಿಗೆದಾರರು ಹಾಗೂ ಇಂಜಿನಿಯರ್ಗಳು ತಕ್ಷಣ ಕಾಮಗಾರಿ ಆರಂಭಿಸಿ ಬಾಕಿ ಇರುವ ಕೆಲಸವನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ನಿರ್ಲಕ್ಷ್ಯ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮಳ್ಳೂರು, ಕಲ್ಲೂರು ಹಾಗೂ ಹೇರೂರು ಗ್ರಾಮಸ್ಥರು ಒಗ್ಗಟ್ಟಾಗಿ ಹೋರಾಟಕ್ಕೆ ಮುಂದಾಗಿದ್ದು, ಮುಂದಿನ ಮಂಗಳವಾರ ಬಸವನಹಳ್ಳಿ ಭಾಗದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಗಮನ ಸೆಳೆಯಲು ನಿರ್ಧರಿಸಿದ್ದಾರೆ.
ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ, ಬಾಕಿ ಇರುವ ಅಭಿವೃದ್ಧಿ ಕಾಮಗಾರಿಯನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂಬುದು ಗ್ರಾಮಸ್ಥರ ಪ್ರಮುಖ ಆಗ್ರಹವಾಗಿದೆ.
















