ಮಡಿಕೇರಿ, NEWS DESK ನ.19: ಕೊಡಗಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಳೆಗಾರರು, ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವುದರ ಜೊತೆಗೆ ಜೆಡಿಎಸ್ ಪಕ್ಷದ ಬಲವರ್ಧನೆಗೆ ಒತ್ತು ನೀಡುವ ಉದ್ದೇಶದಿಂದ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನ.22ರಂದು ಸೋಮವಾರಪೇಟೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಸಿ.ಎಲ್. ವಿಶ್ವ ತಿಳಿಸಿದ್ದಾರೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಪಕ್ಷದ ಜಿಲ್ಲಾ ಪ್ರಮುಖರೊಂದಿಗೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಅಧ್ಯಕ್ಷರ ಘೋಷಣೆಯಾಗುವ ಸಾಧ್ಯತೆಯಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಒಳಗೊಂಡಂತೆ ಏಳು ಮಂದಿ ಆಕಾಂಕ್ಷಿಗಳಿದ್ದು, ಯಾರನ್ನೇ ಆಯ್ಕೆ ಮಾಡಿದರೂ ಒಗ್ಗಟ್ಟಿನಿಂದ ಪಕ್ಷದ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದರು.
ಬೆಳಗ್ಗೆ 11 ಗಂಟೆಗೆ ಸೋಮವಾರಪೇಟೆಯ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಈ ಸಂದರ್ಭದಲ್ಲಿ ಸಿ ಮತ್ತು ಡಿ ಜಮೀನುಗಳ ಸಮಸ್ಯೆ, ಸೆಕ್ಷನ್ 4, ಕಸ್ತೂರಿರಂಗನ್ ವರದಿ ಹಾಗೂ ವನ್ಯಜೀವಿ-ಮಾನವ ಸಂಘರ್ಷ ಸೇರಿದಂತೆ ಜಿಲ್ಲೆಯ ಪ್ರಮುಖ ಸಮಸ್ಯೆಗಳ ಕುರಿತು ಬೆಳೆಗಾರರು, ಕಾರ್ಮಿಕರು ಮತ್ತು ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸಂವಾದ ನಡೆಸಲಿದ್ದಾರೆ ಎಂದರು.
2018-19ನೇ ಸಾಲಿನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಲಾ 9.75 ಲಕ್ಷ ರೂ. ವೆಚ್ಚದಲ್ಲಿ ಸುಮಾರು ಆರು ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗಿತ್ತು. ಪ್ರವಾಹ ಸಂತ್ರಸ್ತರಿಗೆ ಬಾಡಿಗೆ ಮನೆಗಾಗಿ ತಿಂಗಳಿಗೆ 10 ಸಾವಿರ ರೂ. ಹಾಗೂ ಮನೆಬಳಕೆಯ ವಸ್ತುಗಳನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗಿತ್ತು ಎಂದು ವಿಶ್ವ ಸ್ಮರಿಸಿದರು. ಇದೇ ಅವಧಿಯಲ್ಲಿ ಕುಶಾಲನಗರ ಮತ್ತು ಪೊನ್ನಂಪೇಟೆ ನೂತನ ತಾಲ್ಲೂಕುಗಳ ರಚನೆಗೂ ಕ್ರಮ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು.
ರಾಜ್ಯದಲ್ಲಿ ಬರ ಘೋಷಣೆಯಾಗಿದ್ದರೂ ರೈತರಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ತೆರಿಗೆ ಹಾಗೂ ಬೆಲೆಗಳನ್ನು ಹೆಚ್ಚಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸದೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟು ಮಾಡಲಾಗುತ್ತಿದೆ. ಜಿಲ್ಲೆಗೆ ಯಾವುದೇ ವಿಶೇಷ ಪ್ಯಾಕೇಜ್ ದೊರೆತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ವಿರಾಜಪೇಟೆ ತಾಲ್ಲೂಕು ಯುವ ಜೆಡಿಎಸ್ ಅಧ್ಯಕ್ಷ ಪಿ.ಎ. ಮಂಜುನಾಥ್ ಮಾತನಾಡಿ, ವಿರಾಜಪೇಟೆ-ಮಡಿಕೇರಿ ಹಾಗೂ ವಿರಾಜಪೇಟೆ-ಮಾಕುಟ್ಟ ರಸ್ತೆಗಳು ಹದಗೆಟ್ಟಿದ್ದು, 20 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದಿದೆ. ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುವುದು ಎಂದರು.
ಮಡಿಕೇರಿ ತಾಲ್ಲೂಕು ಅಧ್ಯಕ್ಷ ರವಿಕಿರಣ್ ಶೆಟ್ಟಿ ಮಾತನಾಡಿ, ಮಡಿಕೇರಿ ನಗರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಅಗತ್ಯ ಅನುದಾನ ಒದಗಿಸಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ ಸ್ವಾಗತ್, ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಶಿವದಾಸ್ ಹಾಗೂ ಜಿಲ್ಲಾ ಯುವ ಜೆಡಿಎಸ್ ಕಾರ್ಯದರ್ಶಿ ಪಾಣತ್ತಲೆ ಸತ್ಯ ಉಪಸ್ಥಿತರಿದ್ದರು.
















