ವಿರಾಜಪೇಟೆ, NEWS DESK ನ.20: ಸಮೀಪದ ಹೆಗ್ಗಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಹೆಗ್ಗಳ ಗ್ರಾಮದ ಅರ್ಚಕರಾದ ವಾಮನಮೂರ್ತಿ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಹೂವಿನಿಂದ ಅಲಂಕರಿಸಲಾದ ಮಂಟಪದಲ್ಲಿ ಶ್ರೀ ಮಹಾಗಣಪತಿ ಹಾಗೂ ಶ್ರೀ ಸರಸ್ವತಿ ದೇವಿಯ ಭಾವಚಿತ್ರಗಳನ್ನು ಪ್ರತಿಷ್ಠಾಪಿಸುವ ಮೂಲಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮೊದಲಿಗೆ ಗಣಪತಿ ಪೂಜೆ ಹಾಗೂ ಸಂಕಲ್ಪ ನೆರವೇರಿಸಲಾಯಿತು. ಬಳಿಕ ಪುಷ್ಪಾರ್ಚನೆ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ಸಲ್ಲಿಸಲಾಯಿತು. ನೈವೇದ್ಯ ಸಮರ್ಪಿಸಿದ ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಅರ್ಚಕರು ಶಾಲೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯ ಮತ್ತು ಶಾಲೆಯ ಶೈಕ್ಷಣಿಕ ಪ್ರಗತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸರಸ್ವತಿ ಮಾತೆ ಮತ್ತು ಗಣಪತಿ ದೇವರಿಗೆ ಭಕ್ತಿಯಿಂದ ನಮಿಸಿದರು. ಬಳಿಕ ಪ್ರಸಾದ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ, ಎಸ್‌ಡಿಎಂಸಿ ಅಧ್ಯಕ್ಷೆ ರೋಹಿಣಿ, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
















