ಮಡಿಕೇರಿ, NEWS DESK ನ.20: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ, ಮೂರ್ನಾಡು ಕನ್ನಡ ಸಾಹಿತ್ಯ ಪರಿಷತ್ತು, ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೂರ್ನಾಡು ಹೋಬಳಿ ಘಟಕದ ವಿವಿಧ ಸಂಘ-ಸಂಸ್ಥೆಗಳು ಮತ್ತು ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಮೂರ್ನಾಡು ಹೋಬಳಿ ಮಟ್ಟದ 3ನೇ ವರ್ಷದ 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ ನವೆಂಬರ್ 21ರಂದು ಮರಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ಮೆರವಣಿಗೆ ನಡೆಯಲಿದ್ದು, ಸಮಾಜ ಸೇವಕರಾದ ಅವರೆಮಾದಂಡ ಶರಣ್ ಪೂಣಚ್ಚ ಹಾಗೂ ಎಡಿಕೇರಿ ಪ್ರಸನ್ನ ಅವರು ಉದ್ಘಾಟಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಶಾಸಕ ಡಾ. ಮಂತರ್ ಗೌಡ ಅವರು ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ, ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಸಮಾಜ ಸೇವಕ ಹರಪಳ್ಳಿ ರವೀಂದ್ರ ಹಾಗೂ ನಿವೃತ್ತ ಶಿಕ್ಷಕ ದೇವಜನ ನಾಣಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.















