ಮಡಿಕೇರಿ, ನ.23 NEWS DESK : ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯ ಸಮಿತಿ ವತಿಯಿಂದ ಡಿ. 5ರಂದು ಮಡಿಕೇರಿಯಲ್ಲಿ ತಾಲೂಕುಮಟ್ಟದ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಹೆಚ್.ಎಂ. ಜಯರಾಮ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಸಮಿತಿ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಹೇಳಿದರು. ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರತಿ ಶಾಲೆ ಮತ್ತು ಕಾಲೇಜಿನಿಂದ ತಲಾ ಇಬ್ಬರು ವಿದ್ಯಾರ್ಥಿಗಳ ತಂಡ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಥಮ ಬಹುಮಾನವಾಗಿ 10 ಸಾವಿರ ರೂ., ದ್ವಿತೀಯ ಬಹುಮಾನವಾಗಿ 5 ಸಾವಿರ ರೂ. ಹಾಗೂ ತೃತೀಯ ಬಹುಮಾನವಾಗಿ 2,500 ರೂ. ನಗದು ಮತ್ತು ಬೆಳ್ಳಿ ಪದಕಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ಹಾಗೂ ನೆನಪಿನ ಕಾಣಿಕೆ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ಈಗಾಗಲೇ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು, ಅಧಿಕಾರಿಗಳಿಂದ ಉತ್ತಮ ಸ್ಪಂದನೆ ದೊರೆತಿದೆ. ಶಿಕ್ಷಕರೇ ರಸಪ್ರಶ್ನೆ ಸ್ಪರ್ಧೆಯ ಕ್ವಿಜ್ ಮಾಸ್ಟರ್ಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು. ಡಿ. 5ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಮಹೇಶ್ ಜೈನಿ, ಮಾಜಿ ಸದಸ್ಯ ಅಮೀನ್ ಮೊಹಿಸಿನ್, ಪ್ರಕಾಶ್ ಆಚಾರ್ಯ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 3.30ಕ್ಕೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಭಾಗವಹಿಸಲಿದ್ದಾರೆ. ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಂಡಗಳನ್ನು ನೋಂದಾಯಿಸಿಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ, ಭಾರತದ ಸಂವಿಧಾನ ಹಾಗೂ ಸಾಮಾನ್ಯ ಜ್ಞಾನ ವಿಷಯಗಳ ಕುರಿತು ರಸಪ್ರಶ್ನೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಡಿ. 4 ನೋಂದಣಿಗೆ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 9480425533 ಅಥವಾ 8431536492 ಸಂಪರ್ಕಿಸಬಹುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಹೆಚ್.ಎನ್. ಯೋಗೇಶ್ ಕುಮಾರ್, ಮಾಜಿ ಅಧ್ಯಕ್ಷ ಹೆಚ್.ಆರ್. ಮುತ್ತಪ್ಪ, ಮಾಜಿ ಕಾರ್ಯದರ್ಶಿ ಹೆಚ್.ಟಿ. ವೆಂಕಪ್ಪ, ಕಾರ್ಯಕ್ರಮ ಸಂಚಾಲಕ ಹೆಚ್.ಬಿ. ಪ್ರಶಾಂತ್ ಹಾಗೂ ಸದಸ್ಯ ಎಂ.ಪಿ. ಜಯಪ್ರಕಾಶ್ ಉಪಸ್ಥಿತರಿದ್ದರು.

















