ಮಡಿಕೇರಿ, ನ.24 NEWS DESK : ಮಡಿಕೇರಿ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ನಾಗದೇವನಹಳ್ಳಿಯ ದೀಕ್ಷಿತ್ (22) ಮೃತಪಟ್ಟ ಯುವಕ. ಅಮ್ಮತ್ತಿಯಲ್ಲಿ ಆಯೋಜಿಸಲಾಗಿದ್ದ ರೋಬಸ್ಟ್ ರ್ಯಾಲಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಪ್ರಜ್ವಲ್ ಹಾಗೂ ದೀಕ್ಷಿತ್ ಸೇರಿದಂತೆ ಮೂವರು ಯುವಕರು ಕಾರಿನಲ್ಲಿ ಆಗಮಿಸಿದ್ದರು. ರ್ಯಾಲಿ ಮುಗಿದ ಬಳಿಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ದೇವರಕೊಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ದೀಕ್ಷಿತ್ ಮೃತಪಟ್ಟಿದ್ದು, ಉಳಿದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















