ಮಡಿಕೇರಿ ನ.24 NEWS DESK : ನಗರದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಮುಖ್ಯಮಂತ್ರಿ ಅವರ ನಗರೋತ್ಥನ ಹಂತ 4 ರಡಿ ನಗರದ ಕಾವೇರಿ ಕಲಾಕ್ಷೇತ್ರ ಸ್ಥಳದಲ್ಲಿ ಸುಮಾರು 950 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಲಾಭವನ ನಿರ್ಮಾಣ ಕಾಮಗಾರಿ ಪರಿಶೀಲಿಸಿ, ಮಾಹಿತಿ ಪಡೆದರು.
ಬಳಿಕ ಮುಖ್ಯಮಂತ್ರಿ ಅವರ ನಗರೋತ್ಥಾನ ಹಂತ-4 ರಡಿ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಾಜಾಸೀಟು ಸಂಪರ್ಕಿಸುವ ಸಿಸಿ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲಿಸಿದರು. ಹಾಗೆಯೇ ನಗರಸಭೆಯ ಉದ್ದಿಮೆ ನಿಧಿಯಡಿ ಗಾಂಧಿ ಮೈದಾನದಲ್ಲಿ ಸುಮಾರು 224 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಂಗಮಂದಿರ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಅವರು ಪರಿಶೀಲಿಸಿದರು. ಈ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಜೊತೆಗೆ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಸೂಚಿಸಿದರು. ಅಭಿವೃದ್ಧಿ ಕಾಮಗಾರಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಾರದಂತೆ ಎಂಜಿನಿಯರ್ಗಳು ಎಚ್ಚರವಹಿಸಬೇಕು. ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎಚ್ಚರಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿ ಬಗ್ಗೆ ಪ್ರತೀ ವಾರ ಮಾಹಿತಿ ಒದಗಿಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಕಾವೇರಿ ಕಲಾಕ್ಷೇತ್ರ ಬಳಿಯ ಸಂಪಿಗೆ ಮರವನ್ನು ಉಳಿಸಿಕೊಂಡು ಕಾವೇರಿ ಕಲಾಕ್ಷೇತ್ರ ಬಹುಮಹಡಿ ಕಟ್ಟಡ ನಿರ್ಮಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಆದಷ್ಟು ರಾಜಾಸೀಟು ಸಿಸಿ ರಸ್ತೆ ಕಾಮಗಾರಿ ಡಿಸೆಂಬರ್ ಮೊದಲ ವಾರದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅವರು ತಾಕೀತು ಮಾಡಿದರು. ನಂತರ ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಉಪಾಹಾರ ಸವಿದ ಜಿಲ್ಲಾಧಿಕಾರಿ ಅವರು ಶುಚಿತ್ವಕ್ಕೆ ಒತ್ತು ನೀಡಬೇಕು. ಆಹಾರದಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟ ತಲಾ 300 ಮಂದಿಗೆ ವಿತರಿಸಲಾಗುತ್ತದೆ ಎಂದು ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಮಾಹಿತಿ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಮಂಜುನಾಥ್ ರಾಮಣ್ಣ ಅವರು ಕಾಮಗಾರಿ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು. ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ನಗರಸಭೆ ಎಇಇ ಸತೀಶ್, ಕಿರಿಯ ಅಭಿಯಂತರರಾದ ಹೇಮಂತ್ ಕುಮಾರ್, ಗುರುರಾಜ್ ಇತರರು ಇದ್ದರು.


















