ಸುಂಟಿಕೊಪ್ಪ, NEWS DESK ನ. 26: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 612 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಿದ್ಯಾರ್ಥಿನಿ ಎ.ಎಸ್. ಶ್ರೀಶಾ ಅವರಿಗೆ ರಾಜ್ಯಮಟ್ಟದ ಮಹಾಸಮಾವೇಶದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇತ್ತೀಚೆಗೆ ಕಲಬುರಗಿಯಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘ (ರಿ.), ಬೆಂಗಳೂರು ವತಿಯಿಂದ ಆಯೋಜಿಸಲಾಗಿದ್ದ ‘ಗ್ರಾಮ ವಿಕಾಸ ಸಂಗಮ 2026’ – ಬದಲಾವಣೆಯ ಹೆಜ್ಜೆ, ಬಲವರ್ಧನೆಯ ಸಂಕಲ್ಪ ಎಂಬ ಘೋಷವಾಕ್ಯದಡಿ ನಡೆದ ರಾಜ್ಯಮಟ್ಟದ ಮಹಾಸಮಾವೇಶದ ಅಂಗವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪಂಚಾಯಿತಿ ಸಿಬ್ಬಂದಿಗಳ ಮಕ್ಕಳ ಪೈಕಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಎ.ಎಸ್. ಶ್ರೀಶಾ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ್ ಭೀಮಣ್ಣ ಖಂಡ್ರೆ ಅವರು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಚೌದಪುರಿ ಹಿರೇಮಠದ ರಾಜಶೇಖರ ಶಿವಾಚಾರ್ಯರು, ಕಲಬುರಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಬಿ-ಗ್ರೇಡ್) ಹುದ್ದೆ ಉನ್ನತೀಕರಣ ಸಂಘದ ರಾಜ್ಯಾಧ್ಯಕ್ಷ ರಮೇಶ್ ನಡಗೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


































