ಮಡಿಕೇರಿ, NEWS DESK ನ.26: ಭಾರತೀಯ ಜನತಾ ಪಾರ್ಟಿಯ ಎಸ್.ಸಿ. ಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಗೌರವ ದಿವಸವನ್ನು ಆಚರಿಸಲಾಯಿತು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂಸತ್ತಿನಲ್ಲಿ ಸಂವಿಧಾನದ ಕರಡು ಪ್ರತಿಯನ್ನು ಮಂಡಿಸಿದ ದಿನದ ಸ್ಮರಣಾರ್ಥವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಗಣ್ಯರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ. ರವಿ ಮೊಗೇರ ಅವರು, ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರಮುಖ ಕಾರಣವಾಗಿದೆ. ದೇಶದ ಎಲ್ಲಾ ಪ್ರಜೆಗಳಿಗೂ ಮತದಾನದ ಹಕ್ಕನ್ನು ನೀಡುವ ಮೂಲಕ ರಾಜಕೀಯ ಸಮಾನತೆಯನ್ನು ಕಲ್ಪಿಸಿರುವುದು ಸಂವಿಧಾನದ ಮಹತ್ವವನ್ನು ತೋರಿಸುತ್ತದೆ ಎಂದರು.
ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಮಾತನಾಡಿ, ಭಾರತೀಯ ಪ್ರಜೆಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನತೆ ದೊರೆಯಲು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ಕಾರಣವಾಗಿದೆ. ಜಗತ್ತಿನ ಅತಿದೊಡ್ಡ ಲಿಖಿತ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ಎಲ್ಲ ವರ್ಗಗಳಿಗೂ ನ್ಯಾಯ ಒದಗಿಸಿದ್ದಾರೆ. ಕೂಲಿ ಕಾರ್ಮಿಕರಿಂದ ಹಿಡಿದು ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದ ಬಗ್ಗೆ ಅಭಿಮಾನವಿದ್ದು, ಭಾರತೀಯರೆಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ಹೇಳಿದರು.
ಮಾಜಿ ಸಚಿವ ಅಪ್ಪಚ್ಚು ರಂಜನ್ ಮಾತನಾಡಿ, ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ನಮ್ಮ ದೇಶದ ದೊಡ್ಡ ಧರ್ಮಗ್ರಂಥವಿದ್ದಂತೆ. ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ಸಂವಿಧಾನದ ಪುಸ್ತಕವನ್ನು ತೋರಿಸಿ ತಾನೇ ಸಂವಿಧಾನದ ರಕ್ಷಕ ಎಂದು ಬಿಂಬಿಸಿಕೊಳ್ಳುತ್ತಿದೆ. ಆದರೆ ಸಂವಿಧಾನಕ್ಕೆ 75ಕ್ಕೂ ಹೆಚ್ಚು ಬಾರಿ ತಿದ್ದುಪಡಿ ತಂದಿರುವುದು ಕಾಂಗ್ರೆಸ್ ಸರ್ಕಾರ ಎಂದು ಟೀಕಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಗಳು ನಡೆದಿವೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಂಸತ್ತಿನವರೆಗೆ ಸಂವಿಧಾನದ ಘನತೆ ಮತ್ತು ಮಹತ್ವವನ್ನು ಎತ್ತಿಹಿಡಿಯಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ. ಲೋಕೇಶ್, ರೈತ ಮೋರ್ಚಾ ಅಧ್ಯಕ್ಷ ರಂಜಿ ಪೂಣಚ್ಚ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಕೊಳೆಯಂಡ ಗಿರೀಶ್, ಎಸ್.ಟಿ. ಮೋರ್ಚಾ ಅಧ್ಯಕ್ಷ ಪರಮೇಶ್ವರ, ಸೋಮವಾರಪೇಟೆ ಎಸ್.ಸಿ. ಮೋರ್ಚಾ ಮಂಡಲ ಅಧ್ಯಕ್ಷ ರಾಮಕೃಷ್ಣ, ಪ್ರಮುಖರಾದ ಬೊಳ್ಳಜಿರ ಅಯ್ಯಪ್ಪ, ಕನ್ನಂಡ ಸಂಪತ್, ಜೇತನ್ ಶಿವಪ್ಪ, ಕನ್ನಿಕೆ, ಅಪ್ಪಣ್ಣ, ಚಂದ್ರ, ಸೌಮ್ಯ, ಹೀರಾ ಸುಬ್ಬಯ್ಯ, ಮನು ಮಂಜುನಾಥ್, ಕಾಂಗಿರ ಸತೀಶ್, ಗೋವಿಂದರಾಜು, ಕೆಂಚೇಶ್ವರ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.


































