ಮಡಿಕೇರಿ, NEWS DESK ನ.28 : ಮಡಿಕೇರಿ–ದೋಣಿಗಲ್ಲು ಮಾರ್ಗದ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.
ನಗರದ ಹೊರವಲಯದ ಕರ್ಣಂಗೇರಿ ಗ್ರಾಮದ ಚಂದ್ರಗಿರಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಡಿಕೇರಿ, ಮಾದಾಪುರ, ಸೋಮವಾರಪೇಟೆ, ಶನಿವಾರಸಂತೆ ಹಾಗೂ ದೋಣಿಗಲ್ಲು ಮಾರ್ಗದಲ್ಲಿ ಸುಮಾರು 96 ಕಿ.ಮೀ. ಉದ್ದದ ರಸ್ತೆ ನಿರ್ಮಾಣವಾಗಲಿದ್ದು, ಈ ಹೆದ್ದಾರಿ ವ್ಯಾಪ್ತಿಯಲ್ಲಿ 15 ಗ್ರಾಮ ಪಂಚಾಯಿತಿಗಳು ಬರಲಿವೆ. ಸುಮಾರು 60 ಅಡಿ ಅಗಲದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದು ವಿವರಿಸಿದರು.
ಈ ಯೋಜನೆಗೆ ಸುಮಾರು 1,300 ಕೋಟಿ ರೂ. ವೆಚ್ಚವಾಗಲಿದ್ದು, ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಇದೊಂದು ಮಹತ್ವದ ಅಭಿವೃದ್ಧಿ ಯೋಜನೆಯಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪ್ರಜಾಸೇವಾ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಶನಿವಾರ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿಯಾನ ಆಯೋಜಿಸಲು ಚಿಂತಿಸಲಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿಯನ್ನು ಅರಿತು, ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು. ರಜೆ ದಿನಗಳಲ್ಲಿಯೂ ಕುಟುಂಬದೊಂದಿಗೆ ಸಮಯ ಕಳೆಯುವಂತೆ ಸಾರ್ವಜನಿಕರ ಕೆಲಸಗಳಿಗೂ ಆದ್ಯತೆ ನೀಡುವುದು ಅಗತ್ಯ ಎಂದು ಹೇಳಿದರು.
ಗ್ರಾಮೀಣ ಭಾಗದ ಜನರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಲು ಪ್ರಜಾಸೇವಾ ಅಭಿಯಾನ ಸಹಕಾರಿಯಾಗಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅತ್ಯಗತ್ಯ ಎಂದರು.
ಈ ಬಾರಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಬರ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸೇರಿದಂತೆ ಸಾರ್ವಜನಿಕರ ಅಗತ್ಯ ಕೆಲಸಗಳಿಗೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ತಾಕೀತು ಮಾಡಿದರು.
ಜನರಿಗೆ ಸುಳ್ಳು ಆಶ್ವಾಸನೆಗಳನ್ನು ನೀಡದೆ, ಅವರ ವಿವಿಧ ಬೇಡಿಕೆಗಳನ್ನು ಕಾನೂನುಬದ್ಧವಾಗಿ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿದರು.
ಕರ್ಣಂಗೇರಿಯಲ್ಲಿ ನಡೆದ ಪ್ರಜಾಸೇವಾ ಅಭಿಯಾನದಲ್ಲಿ 120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಕಂದಾಯ, ಆಹಾರ, ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ವಿದ್ಯುತ್ ಸೇರಿದಂತೆ ವಿವಿಧ ಇಲಾಖೆಗಳ ಸಂಬಂಧ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿದ್ದು, ಹಲವು ಅರ್ಜಿಗಳಿಗೆ ಶಾಸಕರು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು. ಬಳಿಕ ಹಲವು ಕುಟುಂಬಗಳಿಗೆ ಜಾಗದ ಹಕ್ಕುಪತ್ರ ವಿತರಿಸಿದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಪ್ರಮುಖರಾದ ಜಾನ್ಸನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೆಂಥಿಲ್ ಕುಮಾರ್, ತಹಶೀಲ್ದಾರ್ ಶ್ರೀಧರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


































