ಮಡಿಕೇರಿ, NEWS DESK ನ.29: ಕ್ರೀಡೆ, ಸೇನೆ, ಕಾಫಿ ಹಾಗೂ ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸಬೇಕೆಂದು ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಮನವಿ ಮಾಡಿದ್ದಾರೆ.
ಪ್ರಸ್ತಾವಿತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯಡಿ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕೊಡಗು ಜಿಲ್ಲೆಯು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಭೌಗೋಳಿಕ ಪರಿಸರ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಗುಡ್ಡಗಾಡು ಪ್ರದೇಶವಾಗಿರುವ ಜಿಲ್ಲೆಯಲ್ಲಿ ಹಲವು ಸ್ಥಳೀಯ ಸಮಸ್ಯೆಗಳಿದ್ದು, ಪ್ರತ್ಯೇಕ ಸಂಸದರನ್ನು ಹೊಂದುವುದರಿಂದ ಈ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರೆತರೆ ಜಿಲ್ಲೆಯ ಸಂಸದರಿಗೆ ವಿಶೇಷ ಜವಾಬ್ದಾರಿ ಹಾಗೂ ಗೌರವ ದೊರೆಯಲಿದೆ. ಸಂಸದರ ಮೂಲಕ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಮತ್ತು ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ತರುವ ಅವಕಾಶವೂ ಹೆಚ್ಚಲಿದೆ. ಅಲ್ಲದೆ, ಸ್ಥಳೀಯ ಜನರಿಗೆ ತಮ್ಮ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತರಲು ಸುಲಭವಾಗಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯವರೇ ಸಂಸತ್ ಸದಸ್ಯರಾಗಿ ಆಯ್ಕೆಯಾದರೆ ಸ್ಥಳೀಯ ಶಾಸಕರೊಂದಿಗೆ ಉತ್ತಮ ಸಮನ್ವಯ ಸಾಧಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಕಾರದೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗಂಭೀರ ಸಮಸ್ಯೆಯಾಗಿ ಉಳಿದಿರುವ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ಕೊಡಗಿನ ಸಂಸದರು ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರತ್ಯೇಕವಾಗಿ ಪ್ರಸ್ತಾಪಿಸಿ, ಕೇಂದ್ರದ ಗಮನ ಸೆಳೆಯುವುದರಿಂದ ಸಮಸ್ಯೆ ಪರಿಹಾರಕ್ಕೆ ವೇಗ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೊಡಗಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ ಮತ್ತು ಕಾಳುಮೆಣಸು ಬೆಳೆಗಾರರು ಬೆಲೆ ಕುಸಿತ, ಹವಾಮಾನ ವೈಪರೀತ್ಯ ಹಾಗೂ ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಹಾಗೂ ನಿಯೋಗ ತೆರಳಲು ಪ್ರತ್ಯೇಕ ಸಂಸದೀಯ ಕ್ಷೇತ್ರ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಪ್ರವಾಸೋದ್ಯಮ ಕ್ಷೇತ್ರದಲ್ಲಿಯೂ ಕೊಡಗು ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ. ಭಾರತದ ಸ್ಕಾಟ್ಲೆಂಡ್ ಹಾಗೂ ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧವಾಗಿರುವ ಕೊಡಗಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ವಿಶೇಷ ಯೋಜನೆಗಳ ಅಗತ್ಯವಿದೆ. ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರೆತರೆ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ನಡೆಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿಯೂ ಕೊಡಗು ಅಪಾರ ಸಾಧನೆ ಮಾಡಿದ್ದು, ಹಲವು ಒಲಿಂಪಿಯನ್ಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ, ಮೂಲಸೌಕರ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನ ದೊರಕಿಸುವ ನಿಟ್ಟಿನಲ್ಲಿಯೂ ಪ್ರತ್ಯೇಕ ಸಂಸದೀಯ ಕ್ಷೇತ್ರ ಸಹಕಾರಿಯಾಗಲಿದೆ. ಈ ಎಲ್ಲ ಕಾರಣಗಳಿಂದ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸುವುದು ಅಗತ್ಯವಾಗಿದೆ ಎಂದು ಶರಣ್ ಪೂಣಚ್ಚ ಮನವಿ ಮಾಡಿದ್ದಾರೆ.

















