ಸುಂಟಿಕೊಪ್ಪ, NEWS DESK ನ.29: ಯಾವುದೇ ಕ್ರೀಡೆಯಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಬೇಕಾದರೆ ತಳಮಟ್ಟದಿಂದಲೇ ತರಬೇತಿ, ಸತತ ಪ್ರಯತ್ನ ಮತ್ತು ಪರಿಶ್ರಮ ಅಗತ್ಯ ಎಂದು ಅಂತರರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ತರಬೇತುದಾರ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು.
ಶನಿವಾರ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯಲ್ಲಿ ನಡೆದ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸ್ಥೈರ್ಯವನ್ನು ನೀಡುವುದರ ಜೊತೆಗೆ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನೂ ಒದಗಿಸುತ್ತದೆ. ಪೋಷಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸಲು ಅಗತ್ಯವಿರುವ ಎಲ್ಲ ರೀತಿಯ ಅವಕಾಶ ಮತ್ತು ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಕರೆ ನೀಡಿದರು.
ತಮ್ಮ ತಂದೆಯೇ ತನಗೆ ಸ್ಫೂರ್ತಿಯಾಗಿದ್ದು, ತಮ್ಮಲ್ಲಿದ್ದ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಮಾರ್ಗದರ್ಶನ ನೀಡಿದ ಪರಿಣಾಮ ಇಂದು ಈ ಹಂತಕ್ಕೆ ತಲುಪಲು ಸಾಧ್ಯವಾಗಿದೆ ಎಂದು ಸ್ಮರಿಸಿದರು. ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹೇರದೆ ಅವರ ಪ್ರತಿಭೆಗೆ ಪ್ರೋತ್ಸಾಹ ಮತ್ತು ಮನ್ನಣೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಕ್ರೀಡಾ ಕ್ಷೇತ್ರದಲ್ಲಿ ವೈಯಕ್ತಿಕ ಹಾಗೂ ತಂಡದ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಮೊದಲ ನಾಲ್ಕು ಸ್ಥಾನಗಳೊಳಗೆ ಗುರುತಿಸಿಕೊಳ್ಳುವ ಗುರಿ ಹೊಂದಿರಬೇಕು. ಇದು ಕ್ರೀಡಾ ಜೀವನದಲ್ಲಿ ಯಶಸ್ಸು ಸಾಧಿಸಲು ಉತ್ತಮ ಮಾರ್ಗವಾಗಿದೆ ಎಂದರು.
ಸಂತ ಮೇರಿ ಸಂಯುಕ್ತ ಶಿಕ್ಷಣ ಸಂಸ್ಥೆಯ ಮಕ್ಕಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗಳನ್ನು ಶ್ಲಾಘಿಸಿದ ಅವರು, ಇದಕ್ಕಾಗಿ ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದರು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಟರ್ಫ್ ಕ್ಲಬ್ನ ಮಾಜಿ ಅಧ್ಯಕ್ಷ ಹಾಗೂ ಬೆಟ್ಟಗೇರಿ ಸಮೂಹ ತೋಟಗಳ ಮಾಲೀಕ ಡಿ.ವಿನೋದ್ ಶಿವಪ್ಪ ಅವರು, ಕ್ರೀಡೆಯಲ್ಲಿ ಭಾಗವಹಿಸುವುದೇ ವಿಶೇಷ. ಸೋಲು-ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ತಮ್ಮ ಕ್ರೀಡಾ ಜೀವನದ ಅನುಭವಗಳನ್ನು ಮೆಲುಕು ಹಾಕಿದರು.
ಸಂತ ಮೇರಿ ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ತಮ್ಮ ಕುಟುಂಬ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದರು. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಲಾ ₹5 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂತ ಮೇರಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ರೇ. ಫಾ. ವಿಜಯಕುಮಾರ್ ಮಾತನಾಡಿ, ಮಕ್ಕಳನ್ನು ಚೆನ್ನಾಗಿ ಬೆಳೆಸುವುದಷ್ಟೇ ಪೋಷಕರ ಜವಾಬ್ದಾರಿಯಲ್ಲ; ಅವರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದೂ ಅಷ್ಟೇ ಮುಖ್ಯ ಎಂದರು.
ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಸುಲಭವಲ್ಲ. ಯಶಸ್ಸು ಗಳಿಸಲು ಪರಿಶ್ರಮದ ಹಾದಿಯಲ್ಲಿ ಮುನ್ನಡೆಯಬೇಕು. ಗುರಿ ಸಾಧನೆಗಾಗಿ ಎಷ್ಟು ಶ್ರಮಿಸಿದ್ದೀರಿ ಎಂಬುದಕ್ಕಿಂತ ಸಾಧನೆಯ ಫಲಿತಾಂಶದ ಮೂಲಕವೇ ಜಗತ್ತು ನಿಮ್ಮನ್ನು ಗುರುತಿಸುತ್ತದೆ ಎಂದು ಹೇಳಿದರು.
ವೇದಿಕೆಯಲ್ಲಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್ ಹಾಗೂ ಸಂತ ಮೇರಿ ಸಂಯುಕ್ತ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸೆಲ್ವರಾಜ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಎನ್ಸಿಸಿ ವಿದ್ಯಾರ್ಥಿಗಳು ಅತಿಥಿಗಳಿಗೆ ಪಥಸಂಚಲನದ ಮೂಲಕ ಗೌರವ ವಂದನೆ ಸಲ್ಲಿಸಿದರು. ಬಳಿಕ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಬೆಳಗಿಸಲಾಯಿತು.
ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಕ್ಕಳ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದ ಪೋಷಕರು ಮತ್ತು ಸಾರ್ವಜನಿಕರ ಮನಸೂರೆಗೊಂಡವು.
ಈ ಸಂದರ್ಭದಲ್ಲಿ ಮಾದಂಡ ತಿಮ್ಮಯ್ಯ ಮತ್ತು ಡಿ.ವಿನೋದ್ ಶಿವಪ್ಪ ಅವರನ್ನು ಶಿಕ್ಷಣ ಸಂಸ್ಥೆಯ ವತಿಯಿಂದ ರೇ. ಫಾ. ವಿಜಯಕುಮಾರ್ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿದರು.

















