ಪ್ರಕೃತಿ ವಿಕೋಪ ಕಾಮಗಾರಿಗೆ ರೂ. 100 ಕೋಟಿ ಬಿಡುಗಡೆಗೆ ಶಾಸಕ ಕೆ.ಜಿ.ಬೋಪಯ್ಯ ಕೋರಿಕೆ

May 7, 2020

ಮಡಿಕೇರಿ ಮೇ.07 : ಕೊಡಗು ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಬಿದ್ದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾದ ರಸ್ತೆ, ಸೇತುವೆ, ತಡೆಗೋಡೆ ಮತ್ತು ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೊಡಗು ಜಿಲ್ಲೆಗೆ ಜಿಲ್ಲಾಡಳಿತದ ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಎಂದು 536 ಕೋಟಿ ರೂ. ವನ್ನು ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಇತರೆ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಿ ಆದೇಶ ಹೊರಡಿಸಲಾಗಿದ್ದು,
ಈ ಹಿನ್ನೆಲೆ ಮೊದಲ ಕಂತಾಗಿ 100 ಕೋಟಿ ರೂ.ವನ್ನು ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳುವ ಕಾಮಗಾರಿಗಳಿಗೆ ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಅದರಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿ ಅವರು ಆಡಳಿತಾತ್ಮಕ ಒಪ್ಪಿಗೆ ನೀಡಿದ್ದು, ಈಗಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಮಳೆಗಾಲ ಆರಂಭವಾಗುವುದರ ಒಳಗೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಇಲ್ಲದಿದ್ದಲ್ಲಿ ಮಳೆಗಾಲದಲ್ಲಿ ಅನೇಕ ಗ್ರಾಮಗಳಿಗೆ ಸಂಪರ್ಕ ಇಲ್ಲದಂತಾಗುತ್ತದೆ.
ಆದ್ದರಿಂದ ಕೊಡಗು ಜಿಲ್ಲೆಗೆ ಈವರೆಗೆ ಎನ್‍ಡಿಆರ್‍ಎಫ್ ನಿಧಿಯಿಂದ ಕೇವಲ 10 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ತಾವು 2020 ರ ಮಾರ್ಚ್ 11 ರಂದು ಮನವಿ ಪತ್ರಕ್ಕೆ ಸ್ಪಂದಿಸಿ ಮಾಡಿರುವ ಆದೇಶದಂತೆ 100 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚಿಸುವಂತೆ ಮುಖ್ಯಮಂತ್ರಗಳಲ್ಲಿ ವೀರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯ ಅವರು ಮನವಿ ಮಾಡಿದ್ದಾರೆ.