ಕೊಡಗಿನಲ್ಲಿ ಸಂಪರ್ಕ ತಡೆಯಲ್ಲಿರುವವರು 7861 ಮಂದಿ

19/05/2020

ಮಡಿಕೇರಿ ಮೇ 19 : ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ಎರಡನೇ ಪ್ರಕರಣ ಪತ್ತೆಯಾಗಿದ್ದರೂ, ಇವರಿಂದ ಇತರರಿಗೆ ಸೋಂಕು ಹರಡಿರುವ ಸಾಧ್ಯತೆಗಳಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿದೇಶದಿಂದ 13 ಮಂದಿ: ಕೊಡಗು ಜಿಲ್ಲೆಗೆ ಇದುವರೆಗೆ ವಿದೇಶದಿಂದ 13ಮಂದಿ ಆಗಮಿಸಿದ್ದು, ಇತರ ರಾಜ್ಯಗಳಿಂದ 453 ಮಂದಿ ಬಂದಿದ್ದಾರೆ. ಇವರನ್ನು 14 ದಿನಗಳ ಕಾಲ ಕಡ್ಡಾಯವಾಗಿ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತದೆ. ಇತರ ಜಿಲ್ಲೆಗಳಿಂದ 7395 ಮಂದಿ ಆಗಮಿಸಿದ್ದು, ಮಂಗಳವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 7861 ಮಂದಿ ಸಂಪರ್ಕ ತಡೆಯಲ್ಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1611 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ ಇಬ್ಬರಲ್ಲಿ ಮಾತ್ರ ಸೋಂಕು ದೃಢಪಟ್ಟಿದೆ. ಅವರಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದಾರೆ. 1339 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದೆ. 270 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, 94 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.