ವಿಶೇಷ ಟಾಸ್ಕ್ ಫೋರ್ಸ್ ರಚನೆ

22/05/2020

ಬೆಂಗಳೂರು ಮೇ 21 : ಚೀನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್ ಫೋರ್ಸಿನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ರಾಜ್ಯದಲ್ಲಿ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹಕಗಳ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಸ್ಥಗಿತ ಗೊಂಡಿದ್ದ ಕಾರ್ಖಾನೆಗಳಲ್ಲಿ ಪ್ರಸ್ತುತ ಶೇ. 70 ರಷ್ಟು ಕೈಗಾರಿಕೆಗಳು ಪುನರಾರಂಭಗೊಂಡಿವೆ. ಈ ನಿಟ್ಟಿನಲ್ಲಿ ಕೈಗಾರಿಕಾ ವಲಯದ ಪರಿಣತರೊಂದಿಗೆ, ಅಂತಾರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸರ್ಕಾರವು ಸಮಾಲೋಚನೆ ನಡೆಸುತ್ತಿದೆ. ಇದಲ್ಲದೆ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕೈಗಾರಿಕೋದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದ್ದು, ಇದರಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.