ಕೊಡಗು ಕೋವಿಡ್-19 : ಪ್ರಯೋಗಾಲಯ ಪರೀಕ್ಷಾ ವರದಿ ನಿರೀಕ್ಷೆಯಲ್ಲಿ 315 ಮಂದಿ

May 25, 2020

ಮಡಿಕೇರಿ ಮೇ 25 : ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ರ ಸಂಬಂಧ 2218 ಮಂದಿಯ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನೂ 315 ಪ್ರಕರಣಗಳಲ್ಲಿ ವರದಿಯ ನಿರೀಕ್ಷೆಯಲ್ಲಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಕಳುಹಿಸಲಾದ 2218 ಪ್ರಕರಣಗಳಲ್ಲಿ 1900 ಪ್ರಕರಣಗಳು ನೆಗೆಟಿವ್ ವರದಿ ಬಂದಿದ್ದು, ಮೂರು ಪ್ರಕರಣಗಳಲ್ಲಿ ಮಾತ್ರ ಪಾಸಿಟಿವ್ ಬಂದಿದೆ. ಈ ಪೈಕಿ ಒಬ್ಬರು ಗುಣಮುಖರಾಗಿದ್ದು,ಉಳಿದ ಇಬ್ಬರ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್-19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇತರೆ ದೇಶ/ರಾಜ್ಯಗಳಿಂದ ಜಿಲ್ಲೆಗೆ ಪ್ರವೇಶಿಸಿರುವ ಜನರನ್ನು ಕಡ್ಡಾಯವಾಗಿ 14 ದಿನಗಳ ಕಾಲ ಸಾಂಸ್ಥಿಕ ಸಂಪರ್ಕ ತಡೆಯಲ್ಲಿಡಲಾಗುತ್ತಿದೆ. ಅದರಂತೆ ಕಳೆದ 14 ದಿನಗಳಲ್ಲಿ ಪಾಸ್‍ಗಳನ್ನು ಪಡೆದು ವಿದೇಶದಿಂದ ಆಗಮಿಸಿದ 13, ಇತರ ರಾಜ್ಯಗಳ 255 ಮಂದಿ ಸೇರಿದಂತೆ 268 ಮಂದಿಯನ್ನು ಸಂಪರ್ಕ ತಡೆಯಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 86 ಮಂದಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.