ಬ್ರಹ್ಮಾಂಡ ಗುರೂಜಿ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
26/05/2020

ಮಡಿಕೇರಿ ಮೇ 26 : ಕೊಡಗು ಜಿಲ್ಲೆ ಮುಂದಿನ ದಿನಗಳಲ್ಲಿ ಭೂಕಂಪದಿಂದ ನೆಲಸಮವಾಗಲಿದೆ ಎಂದು ಭವಿಷ್ಯ ನುಡಿದಿರುವ ಬ್ರಹ್ಮಾಂಡ ಗುರೂಜಿ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಮಾಜದಲ್ಲಿ ಆತಂಕ ಸೃಷ್ಟಿಸುವ ಹೇಳಿಕೆ ನೀಡಿರುವ ಗುರೂಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೊಡಗು ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಣ್ಣೀರ ಹರೀಶ್ ಮಾದಪ್ಪ, ಜಂಟಿ ಕಾರ್ಯದರ್ಶಿ ಬಾಚಂಗಡ ದಾದ ದೇವಯ್ಯ ಹಾಗೂ ಖಜಾಂಚಿ ಮಾಣೀರ ವಿಜಯ ನಂಜಪ್ಪ ದೂರು ಸಲ್ಲಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಜನ ಆತಂಕಗೊಂಡಿದ್ದು, ಇದೀಗ ಮಳೆಗಾಲಕ್ಕೂ ಮೊದಲೇ ಭೂಕಂಪದ ಮಾತನಾಡಿ ಜನರನ್ನು ಮತ್ತಷ್ಟು ಭಯದಲ್ಲಿ ಮುಳುಗಿಸಿರುವ ಗುರೂಜಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಯಾವ ಆಧಾರದಲ್ಲಿ ಭವಿಷ್ಯ ನುಡಿದಿದ್ದಾರೆ ಎನ್ನುವುದನ್ನು ಸಾಕ್ಷೀಕರಿಸಬೇಕೆಂದು ಒತ್ತಾಯಿಸಿದ್ದಾರೆ.