ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಡಿಕೇರಿಯಲ್ಲಿ ರೈತರಿಂದ ಪ್ರತಿಭಟನೆ

27/05/2020

ಮಡಿಕೇರಿ ಮೇ 27 : ಕೊರೋನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸಾಮಾಜಿಕ ಅಂತರ ಕಾಯ್ದುಕೊಂಡು ಧರಣಿ ಕುಳಿತ ಸಂಘದ ಮುಖಂಡರು ಹಾಗೂ ಸದಸ್ಯರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಲಾಕ್‍ಡೌನ್‍ನಿಂದಾಗಿ ಬೆಳೆದ ಬೆಳೆಗೆ ಮಾರುಕಟ್ಟೆ ಇಲ್ಲದೆ ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಕಳೆದೆರಡು ವರ್ಷಗಳ ಪ್ರಾಕೃತಿ ವಿಕೋಪದಿಂದ ತತ್ತರಿಸಿದ್ದ ರೈತರು, ಲಾಕ್‍ಡೌನ್ ಹಿನ್ನೆಲೆ ಸಾಮಾಜಿಕ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಷ್ಟ್ರೀಯ ವಿಪತ್ತು ಪರಿಹಾರದಂತೆ ಜಿಲ್ಲೆಯ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಮಳೆಹಾನಿ ಸಂತ್ರಸ್ತರಿಗೆ ವಸತಿ ಮತ್ತು ಜಮೀನನ್ನು ಕಲ್ಪಿಸಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿಗೊಳಿಸಿದರೆ ಕಾರ್ಪೊರೇಟ್ ಸಂಸ್ಥೆಗಳಿಗೆ ಮಾತ್ರ ಲಾಭವಾಗುವುದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಡಾ.ಸ್ವಾಮಿನಾಥನ್ ವರದಿಯನ್ವಯ ಉತ್ಪಾದನಾ ವೆಚ್ಚದ ಜೊತೆಗೆ ಶೇ.50ರಷ್ಟು ಲಾಭವನ್ನು ಸೇರಿಸಿ ಎಲ್ಲಾ ಕೃಷಿ ಉತ್ಪನ್ನಗಳನ್ನು ಸರ್ಕಾರ ಖರೀದಿಸಬೇಕು. ಆರ್‍ಬಿಐ ಘೋಷಿಸಿದಂತೆ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲದ ಮರುಪಾವತಿಗೆ ಆ.31ರವರೆಗೆ ಗಡುವಿನ ದಿನಾಂಕವನ್ನು ವಿಸ್ತರಿಸಬೇಕು. ಜಿಲ್ಲೆಯಲ್ಲಿ ಕಾಡಾನೆ ಮತ್ತು ಹುಲಿ ದಾಳಿಯಿಂದ ರೈತರು ಕಂಗಾಲಾಗಿದ್ದು, ಸರ್ಕಾರ ಶಾಶ್ವತ ಕ್ರಮ ಕೈಗೊಳ್ಳಬೇಕು. ಕಾಫಿ ಮತ್ತು ಕರಿಮೆಣಸು ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿಗದಿಪಡಿಸಬೇಕು. ಜಿಲ್ಲೆಯ ರೈತರು ಉಪಯೋಗಿಸುವ 10 ಹೆಚ್.ಪಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕು. ರೈತರ ಬೆಳೆಯನ್ನು ಶೇಖರಿಸಿಡಲು ದೊಡ್ಡ ಪ್ರಮಾಣದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಬೇಕು. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಮರಗಳ ಹಕ್ಕನ್ನು ಅವರಿಗೆ ನೀಡಬೇಕೆಂದು ಮನು ಸೋಮಯ್ಯ ಒತ್ತಾಯಿಸಿದರು.
ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜೈ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಖಜಾಂಚಿ ಇಟ್ಟೀರ ಸಭಿತ ಭೀಮಯ್ಯ, ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ ಮತ್ತಿತರರು ಹಾಜರಿದ್ದರು.