ಪೋನ್-ಇನ್ ಕಾರ್ಯಕ್ರಮ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ : ಶಿಕ್ಷಣಾಧಿಕಾರಿ ಪಿ.ಎಸ್.ಮಚ್ಚಾಡೊ ಮಾಹಿತಿ

28/05/2020

ಮಡಿಕೇರಿ ಮೇ.28 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಜೂನ್, 25 ರಿಂದ ಜುಲೈ, 03 ರವರೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ ವತಿಯಿಂದ ಸಾರ್ವಜನಿಕ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಪೋನ್-ಇನ್ ಕಾರ್ಯಕ್ರಮ ಸಂದರ್ಭದಲ್ಲಿ ಅವರು ಮಾಹಿತಿ ನೀಡಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಮಡಿಕೇರಿ ಮತ್ತು ವಿರಾಜಪೇಟೆ ತಲಾ 8 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 11 ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 7,149 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3,562 ಬಾಲಕರು ಮತ್ತು 3,587 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಒಂದು ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುತ್ತದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತಲಾ 2 ಮಾಸ್ಕ್‍ನ್ನು ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳು ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪೋಷಕರು ಮಕ್ಕಳಿಗೆ ಧೈರ್ಯ ಹೇಳಬೇಕು. ಜೊತೆಗೆ ಪರೀಕ್ಷೆ ಸಿದ್ಧತೆ ಮಾಡಿಕೊಳ್ಳಲು ಉತ್ತೇಜನ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೊ ಅವರು ಪೋನ್ ಇನ್ ಕಾರ್ಯಕ್ರಮದಲ್ಲಿ ಕೋರಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶಿವಲಿಂಗ ಶೆಟ್ಟಿ ಅವರು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಇಂಗ್ಲೀಷ್ ಪರೀಕ್ಷೆ ಬಾಕಿ ಇದ್ದು, ಜೂನ್, 18 ರಂದು ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದರು.
ನೋಡಲ್ ಅಧಿಕಾರಿ ಶ್ರೀನಿವಾಸ್, ಪ್ರಾಂಶುಪಾಲರಾದ ಬೆಳ್ಯಪ್ಪ, ಉಪನ್ಯಾಸಕರಾದ ದಿವಾಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಇತರರು ಇದ್ದರು.