2020-21ನೇ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆ ಬಿಡುಗಡೆ

29/05/2020

ಮಡಿಕೇರಿ ಮೇ 29 : ಜಿಲ್ಲಾ ಅಗ್ರಣೀ ಬ್ಯಾಂಕ್ 2020-21 ನೇ ಸಾಲಿನ ಕೊಡಗು ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷೀಪ್ರಿಯ   ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ನಡೆದ ವಿಶೇಷ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಿದರು.

ನಂತರ  ಉದ್ದೇಶಿಸಿ ಮಾತನಾಡಿದ ಅವರು ಲಾಕ್ ಡೌನ್ ಸಂದರ್ಭದಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು, ಈ ಸಂದರ್ಭದಲ್ಲಿ ಅಗತ್ಶವಿರುವವರಿಗೆ ಸಾಲ ವಿತರಿಸುವುದರ ಮೂಲಕ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು. ಈ ಬಾರಿಯ ವಾರ್ಷಿಕ ಸಾಲ ಯೋಜನೆಯು ಆಧುನಿಕ ತಂತ್ರಜ್ಞಾನಾಧಾರಿತ ಕೃಷಿಗೆ ಹೆಚ್ಚಿನ ಒತ್ತು ನೀಡಿದ್ದು ಜಿಲ್ಲೆಯ ಕೃಷಿಕರಿಗೆ ವರದಾನವಾಗಲಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(ಮೊದಲಿನ ಕಾರ್ಪೋರೇಶನ್ ಬ್ಯಾಂಕ್) ದ ಮೈಸೂರು ವಲಯದ ಉಪ ಮಹಾ ಪ್ರಬಂಧಕರಾದ  ಸಿ.ವಿ.ಮಂಜುನಾಥ ಅವರು 2020-21 ನೇ ಸಾಲಿಗೆ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ವಯ ರೂ.4275 ಕೋಟಿ ಗುರಿ ನಿಗದಿಪಡಿಸಿದ್ದು, ಅದರಲ್ಲಿ 85 ಪ್ರತಿಶತ (ರೂ. 3650 ಕೋಟಿ) ಆದ್ಯತಾ ವಲಯಕ್ಕೆ ಮೀಸಲಿಟ್ಟಿದ್ದು ಅವುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ರೂ.2565 ಕೋಟಿ, ಕಿರು ಮತ್ತು ಮಧ್ಯಮ ಗಾತ್ರದ ಉದ್ಯಮ ಕ್ಷೇತ್ರಕ್ಕೆ ರೂ.809 ಕೋಟಿ ಮತ್ತು ಇತರೆ ಆದ್ಯತಾ ವಲಯಕ್ಕೆ ರೂ. 276 ಕೋಟಿ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಬ್ಯಾಂಕುಗಳು ಜನರಿಗೆ ಸಾಲ ವಿತರಿಸುವುದರ ಮೂಲಕ ನಿಗದಿಪಡಿಸಿರುವ ಗುರಿಯನ್ನು ಸಾಧಿಸಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಲೀಡ್ ಬ್ಯಾಂಕ್ ಮುಖ್ಯಸ್ಥ ಆರ್.ಕೆ.ಬಾಲಚಂದ್ರ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಲೀಡ್ ಬ್ಯಾಂಕ್ ವತಿಯಿಂದ ಜಿಲ್ಲಾ ವಾರ್ಷಿಕ ಸಾಲ ಯೋಜನೆ ಬಿಡುಗಡೆ ಮಾಡಲಾಗಿದ್ದು, ಈ ಕ್ರಿಯಾ ಯೋಜನೆಯು ನಬಾರ್ಡ್ ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿದ ಸಾಮರ್ಥ್ಯ ಆಧಾರಿತ ಸಾಲ ಯೋಜನೆಯ ನೆರವನ್ನು ಪಡೆದು ಬ್ಯಾಂಕುಗಳ ವಲಯವಾರು ಹಂಚಿಕೆಗಳಿಗನುಸಾರವಾಗಿ ಜೊತೆಗೆ, ಹಿಂದಿನ ವರ್ಷದ ಆಯಾ ಬ್ಯಾಂಕುಗಳ ಸಾಧನೆಯನ್ನು ಮಾನದಂಡವಾಗಿಟ್ಟುಕೊಂಡು ವಾರ್ಷಿಕ ಸಾಲ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರಲ್ಲದೆ ಕೊಡಗು ಕೃಷಿ ಪ್ರಧಾನ ಜಿಲ್ಲೆಯಾಗಿರುವುದರಿಂದ ಕೃಷಿ ಮತ್ತು ಆದ್ಯತಾ ವಲಯಕ್ಕೆ ಒತ್ತು ನೀಡುವ ಉದ್ದೇಶದಿಂದ ಗುರಿಯನ್ನು ನಿಗದಿಪಡಿಸಲಾಗಿದೆ ಹಾಗೂ 2020-21 ನೇ ವರ್ಷವು ಉನ್ನತ ತಂತ್ರಜ್ಞಾನಾಧಾರಿತ ಕೃಷಿ ಎಂಬುದು ಘೋಷವಾಕ್ಯವಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಲೀಡ್ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ರಾಮಚಂದ್ರ ನಾಯಕ್, ಕೆನರಾ ಬ್ಯಾಂಕಿನ ವಲಯ ಪ್ರಬಂಧಕರಾದ ವಿ.ಜೆ.ಅರುಣ, ಎಸ್.ಬಿ.ಐ. ನ ಮುಖ್ಯ ಪ್ರಬಂಧಕರಾದ ದಿನೇಶ್ ಪೈ, ಕೆ.ಜಿ.ಬಿ. ಯ ವಲಯ ಪ್ರಬಂಧಕರಾದ ಅಶೋಕ ಮತ್ತಿತರರು ಉಪಸ್ಥಿತರಿದ್ದರು.